Menu

ಕುಡಿಯುವ ನೀರಿನ ಸಮಸ್ಯೆ: ಡಿಸಿಗಳೇ ನೇರ ಹೊಣೆಯೆಂದು ಸಿಎಂ ಎಚ್ಚರಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ತಾಪ ತೀವ್ರಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ 419.50 ಕೋಟಿ ರೂ. ಮೀಸಲಿಟ್ಟಿದೆ. ಜಿಲ್ಲಾಧಿಕಾರಿಗಳ ವರದಿಯ ಆಧಾರದ ಮೇಲೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸೂಚಿಸಲಾಗಿದೆ. ಕಂದಾಯ, ಪಂಚಾಯತ್‌ ಮತ್ತು ನಗರಾಭಿವೃದ್ಧಿ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ರಾಜ್ಯದ 114 ತಾಲೂಕುಗಳ 598 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದು, 137 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ನೀರಿಗಾಗಿ ಖಾಸಗಿ ಬೋರ್‌ವೆಲ್ ಮತ್ತು ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲು ಸರ್ಕಾರ ಮುಂದಾಗಿದೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 321.93 ಟಿಎಂಸಿ ನೀರು ಲಭ್ಯವಿದ್ದು, ಸೋರಿಕೆ ತಡೆದು ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಕ್ಷಣ ‘ಟಾಸ್ಕ್‌ಫೋರ್ಸ್’ ಸಭೆ ನಡೆಸಿ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಆರೋಗ್ಯ ಇಲಾಖೆ ಜೊತೆ ಸೇರಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಮತ್ತು ಜಿ.ಪಂ. ಸಿಇಒಗಳಿಗೆ ನಿರ್ದೇಶನ ನೀಡಿದ್ದಾರೆ.

 

Related Posts

Leave a Reply

Your email address will not be published. Required fields are marked *