ನಾಳೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಸಂಚಾರ ವ್ಯತ್ಯಯಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಎರಡು ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.
ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ (ಸೆಂಟ್ರಲ್ ಕಾಲೇಜ್) ನಡುವಿನ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೆಟ್ರೋ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸಂಚಾರ ಸಂಪೂರ್ಣ ಸ್ಥಗಿತವಾಗಲಿದೆ. ಈ ಎರಡು ಗಂಟೆಗಳ ಅವಧಿಯಲ್ಲಿ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಸೇವೆ ಲಭ್ಯವಿರುವುದಿಲ್ಲ. ಉಳಿದ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಚಲ್ಲಘಟ್ಟ – ವಿಜಯನಗರ ಮಾರ್ಗದಲ್ಲಿ ರೈಲು ಸೇವೆ ಲಭ್ಯವಿರಲಿದೆ. ಎಂ.ಜಿ. ರಸ್ತೆ – ವೈಟ್‌ಫೀಲ್ಡ್ (ಕಾಡುಗೋಡಿ) ಮಾರ್ಗದಲ್ಲೂ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಇರುವುದಿಲ್ಲ. ಭಾನುವಾರ ಬೆಳಗ್ಗೆ ಮೆಜೆಸ್ಟಿಕ್, ಸೆಂಟ್ರಲ್ ಕಾಲೇಜ್, ಕಬ್ಬನ್ ಪಾರ್ಕ್ ಮತ್ತು ಹೊಸಹಳ್ಳಿ ಭಾಗಗಳಿಗೆ ತೆರಳುವವರು ಪರ್ಯಾಯ ಸಾರಿಗೆ ವ್ಯವಸ್ಥೆ ಬಳಸುವಂತೆ ಬಿಎಂಆರ್‌ಸಿಎಲ್ ತಿಳಿಸಿದೆ.


