ಮುಂದಿನ 3 ರಿಂದ 4 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಸಂಜೆ ವೇಳೆಗೆ ತೀವ್ರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ತಿಳಿಸಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೇ 18ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಕೆಲವು ಭಾಗಗಳಲ್ಲಿ 64.5 ಮಿಮೀ ರಿಂದ 115.5 ಮಿಮೀ ವರೆಗೆ ಮಳೆಯಾಗಲಿದೆ. ಮಲೆನಾಡು ಮತ್ತು ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಗಂಟೆಗೆ 40–50 ಕಿ.ಮೀ ವೇಗದ ಬಿರುಗಾಳಿ ಬೀಸುವ ಜೊತೆಗೆ ಕೆಲವು ಕಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೃಷಿ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ, ಕಡಲತೀರ ಪ್ರದೇಶಗಳಲ್ಲಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ನೈಋತ್ಯ ಮುಂಗಾರು ಈ ವರ್ಷ ನಿಗದಿತ ಸಮಯಕ್ಕಿಂತ ಮುಂಚಯೇ ದೇಶ ಪ್ರವೇಶಿಸಬಹುದು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮುಂಗಾರು ಚಟುವಟಿಕೆ ಆರಂಭವಾಗಿದ್ದು, ಮೇ 26ರ ವೇಳೆ ಕೇರಳ ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ನಿರೀಕ್ಷೆ ಇದೆ.


