ಜೂನ್ 18ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದೇ ವೇಳೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪಚುನಾವಣೆಗಳನ್ನೂ ನಡೆಸಲಾಗುವುದು. ರಾಜ್ಯಸಭಾ ಸದಸ್ಯರ ಅವಧಿ ಜೂನ್ 21ರಿಂದ ಜುಲೈ 19ರ ನಡುವೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸ್ಥಾನಗಳು ಖಾಲಿಯಾಗಲಿವೆ ಎಂದು ಆಯೋಗ ಹೇಳಿದೆ.
ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಿಂದ ತಲಾ ನಾಲ್ಕು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಾರ್ಖಂಡ್ನಲ್ಲಿ ಎರಡು ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ.


