ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕೃತವಾಗಿ ನಿರಾಕರಿಸಿದ್ದಾರೆ.
ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಗಮನಕ್ಕೆ ಬಂದ ತಕ್ಷಣ ಕಾರಾಗೃಹದ ಹಿರಿಯ ಅಧಿಕಾರಿಗಳಿಂದ ಮೌಖಿಕವಾಗಿ ಮಾಹಿತಿ ಪಡೆದಿದ್ದೇನೆ. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ಆಘಾತಕಾರಿ ವದಂತಿ ಹರಡಿದ್ದು, ಮರುದಿನ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು, ದರ್ಶನ್ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು.
ಆತ್ಮಹತ್ಯೆ ಯತ್ನದ ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳ ತಂಡವು ದರ್ಶನ್ ಇರುವ ಬ್ಯಾರಕ್ಗೆ ಹೋಗಿ ಸ್ಥಳ ಪರಿಶೀಲನೆ ನಡೆಸಿದೆ. ಈ ಸುದ್ದಿ ಕೇವಲ ವದಂತಿ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಮೈಸೂರಿನ ಮನೋರೋಗ ತಜ್ಞ ಅಭಿಜಿತ್ ಹನಹೋಡು ಮಾಧ್ಯಮಗಳೊಂದಿಗೆ ಮಾತನಾಡುವಾಗ, ದರ್ಶನ್ ಜೈಲಿನ ವಾತಾವರಣದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸುವ ಸಾಧ್ಯತೆ ಇರುತ್ತದೆ. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆ ಅಗತ್ಯವಿದೆ ಎಂದು ಎಚ್ಚರಿಸಿದ್ದರು. ವೈದ್ಯರ ಈ ಹೇಳಿಕೆಯ ಹಿನ್ನೆಲೆಯಲ್ಲಿ ಈ ವದಂತ ಹರಡಿತ್ತು ಎನ್ನಲಾಗಿದೆ.


