Menu

ಚಡಚಣದಲ್ಲಿ ಗುಂಡಿನ ಮೊರೆತ: ಆಸ್ತಿ ವಿವಾದದಲ್ಲಿ ಆರು ಜನರ ಗುಂಡಿಕ್ಕಿ ಹತ್ಯೆ

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಆಸ್ತಿಗೆ ಸಂಬಂಧಿಸಿದ ಕುಟುಂಬ ಕಲಹ ವಿಕೋಪಕ್ಕೆ ಹೋಗಿ ಆರು ಜನರನ್ನು ಕೊಚ್ಚಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಹತ್ಯೆ ಮಾಡಲಾಗಿದೆ.

ಜಮಿನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ‌ ನಿರಾಳೆ ಕುಟುಂಬದ ಮಧ್ಯೆ ಜಗಳವಿತ್ತು. ಕೆಲವು ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ನ್ಯಾಯ ಪಂಚಾಯತಿ ಆಗಿತ್ತು. 15-20 ಜನರನ್ನು ಒಳಗೊಂಡ ದುರ್ಷರ್ಮಿಗಳ ಗುಂಪು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ದಾಳಿ ನಡೆಸಿ ಅಟ್ಟಾಡಿಸಿ 6 ಮಂದಿಯನ್ನು ಕೊಲೆ ಮಾಡಿದೆ.

ನಿರಾಳೆ ಕುಟುಂಬದವರು ಗೋವಿಂದಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ 24 ಎಕರೆ ವಿವಾದಿತ ಜಮೀನನ್ನು ಆರು ತಿಂಗಳ ಹಿಂದೆ ಖರೀದಿ ಮಾಡಿದ್ದರು. ವಿವಾದಿತ ಜಮೀನು ಖರೀದಿಸದಂತೆ ಊರಿನ ಅಪ್ಪುಗೌಡ ಪಾಟೀಲ್ ಹಾಗೂ ಕೊಲೆ ಮಾಡಿದ ಆರೋಪಿಗಳು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಆದರೂ ನಿರ್ಲಕ್ಷಿಸಿ ನಿರಾಳೆ ಕುಟುಂಬದವರು ಜಮೀನು ಖರೀದಿ ಮಾಡಿದ್ದರು.

ಟ್ರ್ಯಾಕ್ಟರ್, ಜೆಸಿಬಿ ಮೂಲಕ ಹೊಲವನ್ನು ಸ್ವಚ್ಛಗೊಳಿಸಿ ಕೃಷಿಗೆ ಸಜ್ಜುಗೊಳಿಸುತ್ತಿದ್ದ ವೇಳೆ ಕುಟುಂಬಸ್ಥರ ಮೇಲೆ ಆರೋಪಿಗಳು ದಾಳಿ ನಡೆಸಿರುವುದಾಗಿ ಮಾಹಿತಿ ಲಭಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

Related Posts

Leave a Reply

Your email address will not be published. Required fields are marked *