Menu

ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಎಚ್ಚರಿಕೆ

ಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಮೊದಲ ಬಾರಿಗೆ ಸಭೆ ನಡೆಸಿ, ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಗುಣಮಟ್ಟ ಮತ್ತು ಜನಸ್ನೇಹಿ ನೀತಿಗಳನ್ನು ಅನುಷ್ಠಾನಗೊಳಿಸಲು ಆಸದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿ / ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು / ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಜನಸ್ನೇಹಿಯಾಗಿ ಮಾನವೀಯ ಹಿತದೃಷ್ಟಿಯಿಂದ ಕೆಲಸಗಳನ್ನು ಮಾಡಬೇಕು ಎಂದಿದ್ದಾರೆ. ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಇಂದಿನಿಂದ ನಮ್ಮ ಕೆಲಸ ಆರಂಭವಾಗಿದೆ. ನಿನ್ನೆ ಕೆಲವು ತೀರ್ಮಾನಗಳನ್ನು ಮಾಡಿದ್ದೇವೆ. ಎಲ್ಲಾ ಅಧಿಕಾರಿಗಳನ್ನು ಕರೆಸಿ ಮಾತನಾಡಿದ್ದೇನೆ. ಯಾವ ದಿಕ್ಕಿನಲ್ಲಿ ಕೆಲಸ ಮಾಡಬೇಕು ಎಂದು ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.

ಸರ್ಕಾರವು ಯಾವುದೇ ಜಾತಿ ಅಥವಾ ಧರ್ಮದ ಪರವಾಗಿಲ್ಲ. ಜನರ ಭಾವನೆಗಳನ್ನು ಪರಿಗಣಿಸಿ ಅಧಿಕಾರಿಗಳು ಕೆಲಸ ಮಾಡಬೇಕು. ಪಾಸಿಟಿವ್ ಆಗಿ ಕೆಲಸ ಮಾಡಬೇಕು, 15 ದಿನಗಳಲ್ಲಿ ಆಕ್ಷನ್ ಪ್ಲಾನ್ ಕೊಡಬೇಕು. ಆಡಳಿತದಲ್ಲಿ ಎಲ್ಲವೂ ಅಕೌಂಟಬಲ್ ಆಗಿರಬೇಕು ಎಂದು ಖಡಕ್‌ ಸೂಚನೆ ಕೊಟ್ಟಿದ್ದಾರೆ.

ಜನ ಮೆಚ್ಚುವ ಆಡಳಿತ, ಸಾರ್ವಜನಿಕರ ಸಂಕಷ್ಟ ಪರಿಹಾರ, ಅಭಿವೃದ್ಧಿಯನ್ನು ಸುಗಮಗೊಳಿಸುವುದು ಸರ್ಕಾರದ ಮುಖ್ಯ ಉದ್ದೇಶ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿಸಂ, ಡ್ರಗ್ಸ್ ಮತ್ತು ಜೂಜಾಟ ತಡೆಗಟ್ಟಲು ಸೂಚನೆ ನೀಡಿದ್ದಾರೆ. ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಯಾವುದೇ ವಿಚಾರದಲ್ಲಾದರೂ ಅಧಿಕಾರಿಗಳಿಗೆ ಬೇಸಿಕ್ ಕಾಮನ್ ಸೆನ್ಸ್ ಬೇಕು. ನಾವು ಇತಿಹಾಸವನ್ನು ನಿರ್ಮಾಣ ಮಾಡಬೇಕು. ಏನಾದರೂ ಒಂದು ಗುರುತನ್ನು ಬಿಟ್ಟು ಹೋಗಬೇಕು ಎಂದು ಹೇಳಿದ್ದಾರೆ. ಆತ್ಮಸಾಕ್ಷಿಗೆ ಅನುಗುಣವಾಗಿ ಒತ್ತಡಕ್ಕೆ ಮಣಿಯದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿ. ಪ್ರತಿ ತಾಲೂಕಿನಲ್ಲೂ ಉತ್ತಮ ಕೆಲಸ ಮಾಡಿ ತೋರಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಮತದಾನದ ಹಕ್ಕನ್ನು ಯಾರೂ ಕಳೆದುಕೊಳ್ಳದಂತೆ ಜಾಗೃತಿ ಮೂಡಿಸುವಂತೆ ಸೂಚಿಸಿದ ಶಿವಕುಮಾರ್‌, ಸಿಎಂ, ಡಿಸಿಎಂ ಸೇರಿ ಎಲ್ಲರೂ ಫಾರ್ಮ್ ತುಂಬಬೇಕು. ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *