ಸಚಿವ ಸಂಪುಟ ಪುನಾರಚನೆ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದು, ಆ ನಿರ್ಧಾರಕ್ಕೆ ಪಕ್ಷದ ಎಲ್ಲ ನಾಯಕರು ಬದ್ಧರಾಗಿರಬೇಕಾಗುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಎರಡನೇ ಪಟ್ಟಿಗೆ ಸಂಬಂಧಿಸಿದಂತೆ ಹಲವು ನಾಯಕರು ಬೇಡಿಕೆ ಸಲ್ಲಿಸುತ್ತಿರುವುದು ಸಹಜ. ಬೇಡಿಕೆ ಇಡುವುದು ತಪ್ಪಲ್ಲ. ಯಾರು ಸಚಿವರಾಗಬೇಕು, ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ಹೈಕಮಾಂಡ್‌ಗೆ ಚೆನ್ನಾಗಿ ತಿಳಿದಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.
ತಾವು ಮತ್ತೆ ಶಿಕ್ಷಣ ಸಚಿವರಾಗಿ ಮುಂದುವರಿಯುವುದು ಬಿಡುವುದು ಸಂಪೂರ್ಣವಾಗಿ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ಅದನ್ನು ಗೌರವಿಸಿ ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ ಮುಖ್ಯಮಂತ್ರಿ ಬಳಿಯೇ ಶಿಕ್ಷಣ ಖಾತೆ ಇದೆ. ಶಿಕ್ಷಣ ಸಚಿವರಿಲ್ಲ ಎಂಬ ಕಾರಣಕ್ಕೆ ಇಲಾಖೆಯ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಹೇಳುವುದು ಸರಿಯಲ್ಲ. ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ ತಕ್ಷಣವೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಮಹತ್ವದ ಆದೇಶಗಳನ್ನು ಹೊರಡಿಸಿದ್ದಾರೆ. ತೆಲಂಗಾಣ ರಾಜ್ಯದಲ್ಲಿಯೂ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಳಿಯೇ ಶಿಕ್ಷಣ ಖಾತೆ ಇದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿಯೂ ಇದೇ ರೀತಿ ಪರಿಸ್ಥಿತಿ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಶಾಲೆಗಳು ಆರಂಭವಾಗುವ ವೇಳೆಗೆ ಹೊಸ ಸಚಿವ ಸಂಪುಟ ರಚನೆಯಾಗಿರಲಿಲ್ಲ. ಇದರಿಂದ ಕೆಲವರು ಗೊಂದಲ ಉಂಟಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಅದು ಗೊಂದಲವಲ್ಲ. ಆಡಳಿತಾತ್ಮಕ ಪ್ರಕ್ರಿಯೆಗಳ ಕಾರಣದಿಂದ ಕೆಲ ನಿರ್ಧಾರಗಳು ಸ್ವಲ್ಪ ವಿಳಂಬವಾಗಿರಬಹುದು ಅಷ್ಟೇ ಹೊರತು ಶಿಕ್ಷಣ ವ್ಯವಸ್ಥೆ ಎಂದಿನಂತೆ ನಡೆಯುತ್ತಿದೆ ಎಂದು ತಿಳಿಸಿದರು.
ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್ಸ್) ಯೋಜನೆ ಕಾಂಗ್ರೆಸ್ ಸರ್ಕಾರದ ಕನಸಿನ ಯೋಜನೆಯಾಗಿದೆ. ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಗಳಿಗೆ ಯಾವುದೇ ಆಧಾರವಿಲ್ಲ. ಶಿವಮೊಗ್ಗದಿಂದಲೇ ಈ ಯೋಜನೆಗೆ ಮತ್ತಷ್ಟು ವೇಗ ನೀಡುವ ಕೆಲಸ ನಡೆಯಲಿದ್ದು, ಸರ್ಕಾರದ ಬದಲಾವಣೆಯ ಸಂದರ್ಭದಲ್ಲಿ ಉಂಟಾದ ಆಡಳಿತಾತ್ಮಕ ವ್ಯತ್ಯಾಸಗಳಿಂದ ಕೆಲವು ಕಾರ್ಯಕ್ರಮಗಳು ಮುಂದೂಡಲ್ಪಟ್ಟಿವೆ ಅಷ್ಟೇ. ಯಾವುದೇ ಯೋಜನೆ ರದ್ದಾಗುವುದಿಲ್ಲ ಅಥವಾ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಬಾರಿ ಸಿಇಟಿ ಪರೀಕ್ಷೆಯಲ್ಲಿ ಸುಮಾರು ಶೇ.೭೪ ರಷ್ಟು ಉತ್ತಮ ಫಲಿತಾಂಶ ದಾಖಲಾಗಿರುವುದು ಸರ್ಕಾರದ ಶಿಕ್ಷಣ ವ್ಯವಸ್ಥೆಯ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಇಲಾಖೆಯಲ್ಲಿ ಕೆಲವು ಕೊರತೆಗಳು ಇದ್ದರೂ ಅವುಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುತ್ತಿದೆ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಸಚಿವ ಸಂಪುಟ ಪುನಾರಚನೆ ಕುರಿತು ಕೆಲ ನಾಯಕರು ಪ್ರತಿಭಟನೆ ನಡೆಸುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಆಸೆ-ಆಕಾಂಕ್ಷೆಗಳು ಪ್ರತಿಯೊಬ್ಬರಿಗೂ ಇರುತ್ತವೆ. ಆದರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ. ಪಕ್ಷದ ಚೌಕಟ್ಟಿನೊಳಗೆ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷದ ಅಭ್ಯರ್ಥಿಗಳೇ ಜಯಗಳಿಸಲಿದ್ದಾರೆ. ಈ ಕುರಿತು ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಸಚಿವ ಸತೀಶ್ ಜಾರಕಿಹೊಳಿ ಅವರ ಅಸಮಾಧಾನದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಧು ಬಂಗಾರಪ್ಪ, ಈ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಜಾರಕಿಹೊಳಿ ಅವರೇ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದರು.
ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದಿರುವ ವಿಚಾರವನ್ನು ಟೀಕಿಸಿದ ಅವರು, ಇದು ಅತ್ಯಂತ ದುರದೃಷ್ಟಕರ ಬೆಳವಣಿಗೆ. ದೇವೇಗೌಡರಂತಹ ಹಿರಿಯ ನಾಯಕರಿಗೆ ಈ ಮೂಲಕ ಅಗೌರವ ತೋರಲಾಗಿದೆ. ಇದು ಬಿಜೆಪಿಯ ರಾಜಕೀಯ ಧೋರಣೆಗೆ ಮತ್ತೊಂದು ಉದಾಹರಣೆ ಎಂದು ಆರೋಪಿಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಕಾರ್ಯ ಪೂರ್ಣಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ. ಎಲ್ಲಾ ಬ್ಲಾಕ್‌ಗಳ ಮುಖಂಡರನ್ನು ಕರೆಸಿ ಸಭೆಗಳನ್ನು ನಡೆಸಲಾಗುತ್ತಿದೆ. ಮತದಾರರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಖಚಿತಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.


