ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಉತ್ತರ ಪ್ರದೇಶ ಮೂಲದವನಾಗಿದ್ದು, ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಹರಿಹರದಲ್ಲಿ ಮಂಗಳವಾರ ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅಯೋಧ್ಯೆಯ ರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ನಾನು ಬಯಸಿದ್ದೆ ಎಂದು ವಿಚಾರಣೆಯ ವೇಳೆ ತಿಳಿಸಿದ್ದಾನೆ. ಅವನ ಮೊಬೈಲ್‌ನಲ್ಲಿ ಪಾಕಿಸ್ತಾನದ ಕೋಡ್ ಹೊಂದಿರುವ ಗ್ರೂಪ್‌ಗಳು ಹಾಗೂ ಮಾರಕಾಸ್ತ್ರಗಳನ್ನು ಹಿಡಿದಿರುವ ಚಿತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.
ಭಾರತದಲ್ಲಿ ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಈತ ಮತ್ತು ತಂಡ ಸಂಚು ರೂಪಿಸಿರುವುದು ದೃಢಪಟ್ಟಿದೆ. ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಆತನ ಮೊಬೈಲ್ ಫೋನ್ ಪರಿಶೀಲಿಸಿದಾಗ ಅಂತಾರಾಷ್ಟ್ರೀಯ ಉಗ್ರ ಜಾಲದೊಂದಿಗೆ ಹೊಂದಿದ್ದ ಪ್ರಮುಖ ಸುಳಿವುಗಳು ಪತ್ತೆಯಾಗಿವೆ. ಪಾಕಿಸ್ತಾನದ ಕಂಟ್ರಿ ಕೋಡ್ ಹೊಂದಿರುವ ಮೊಬೈಲ್ ಸಂಖ್ಯೆಯೊಂದು ರಾಣಾ ಬಾಯ್ ಎಂಬ ಹೆಸರಿನಲ್ಲಿ ಸೇವ್ ಆಗಿದೆ.
ಬಂಧಿತ ಶಂಕಿತ ಉಗ್ರ ಸುಹೇಲ್ ಹರಿಹರ ಪಕ್ಕದ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಸಾಮಾನ್ಯ ಪೇಂಟಿಂಗ್ ಕೆಲಸಗಾರನಾಗಿ ಸೇರಿಕೊಂಡು ಯಾರಿಗೂ ಅನುಮಾನ ಬಾರದಂತೆ ವಾಸವಿದ್ದ. ಆತನ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ತನಿಖೆಯ ವೇಳೆ ಸುಹೇಲ್ ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುವ ಅಂತರ್ಜಾಲದ ರಹಸ್ಯ ಗುಂಪುಗಳಲ್ಲಿ ಸಕ್ರಿಯ ಸದಸ್ಯನಾಗಿರುವುದು ಗೊತ್ತಾಗಿದೆ. ವೃತ್ತಿಪರ ಉಗ್ರರಂತೆ ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಪೋಸ್ ನೀಡಿ ತೆಗೆಸಿಕೊಂಡಿದ್ದ ಫೋಟೋಗಳು ಮೊಬೈಲ್ ಗ್ಯಾಲರಿಯಲ್ಲಿ ಸಿಕ್ಕಿವೆ.


