ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆ ಹಣ ದುರ್ಬಳಕೆ ಆರೋಪದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು.
ಬಳ್ಳಾರಿ ನಗರದ ಅನಂತಪುರ ರಸ್ತೆಯ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಕ್ತರು ಭಕ್ತಿಭಾವದಿಂದ ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಪ್ರಕರಣದಲ್ಲಿ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಪ್ರಾಥಮಿಕ ತನಿಖೆಯ ಪ್ರಕಾರ, 2025ರ ಏಪ್ರಿಲ್ನಿಂದ 2026ರ ಫೆಬ್ರವರಿವರೆಗೆ ಸುಮಾರು 7 ರಿಂದ 7.5 ಕೋಟಿ ಮೊತ್ತದ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ದೇವಸ್ಥಾನದ ಸಿಬ್ಬಂದಿ, ಹಣದ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಮಾಜಿ ಬ್ಯಾಂಕ್ ಉದ್ಯೋಗಿ ಸೇರಿದಂತೆ ಹಲವರು ಆರೋಪಿಗಳಾಗಿದ್ದಾರೆ ಎಂದು ತಿಳಿಸಿದರು.
ಇದು ಕೇವಲ ಹಣದ ಹಗರಣವಲ್ಲ, ಕೋಟ್ಯಂತರ ಭಕ್ತರ ನಂಬಿಕೆಗೆ ಮಾಡಿದ ದ್ರೋಹ. ರಾಜಕೀಯ ಪ್ರಭಾವವಿಲ್ಲದೆ ಸಂಪೂರ್ಣ ಸತ್ಯ ಹೊರಬರಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರ ಪಿ. ಗಾದೆಪ್ಪ, ಮಿಖಂಡರಾದ ಎಲ್. ಮಾರಣ್ಣ, ವೆಂಕಟೇಶ್ ಹೆಗಡೆ, ಜೋಳದರಾಶಿ ತಿಮ್ಮಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.


