ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ಗಂಗಾಧರ ಸ್ವಾಮಿ ,”ಮುಂಜಾನೆ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದೆ. ಆ ಸಮಯದಲ್ಲಿ ಕೊಠಡಿಯಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದರಿಂದ ಮತ್ತು ಯಾರನ್ನೂ ಅಲ್ಲಿಗೆ ಶಿಫ್ಟ್ ಮಾಡದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಸ್ಪೋಟದ ತೀವ್ರತೆಗೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿದ್ದ ಬೆಲೆಬಾಳುವ ವೈದ್ಯಕೀಯ ಯಂತ್ರೋಪಕರಣಗಳು ಹಾಗೂ ಆಪರೇಷನ್ ಟೇಬಲ್ ಸಂಪೂರ್ಣವಾಗಿ ಜಖಂಗೊಂಡಿವೆ. ಆಸ್ಪತ್ರೆಯಲ್ಲಿ ನಿರಂತರವಾಗಿ ಶಸ್ತ್ರಚಿಕಿತ್ಸೆಗಳು ನಡೆಯುತ್ತಿರುವುದರಿಂದ ಈ ಕೊಠಡಿಯ ತುರ್ತು ದುರಸ್ತಿ ಕಾರ್ಯ ಕೈಗೊಳ್ಳಬೇಕಿದೆ. ಸಚಿವರ ಗಮನಕ್ಕೆ ವಿಷಯ ತರಲಾಗಿದ್ದು, ಅವರ ಸೂಚನೆಯಂತೆ ಮೂರ್ನಾಲ್ಕು ದಿನಗಳಲ್ಲಿ ಅಥವಾ ಒಂದು ವಾರದ ಒಳಗಾಗಿ ಕೊಠಡಿಯನ್ನು ಸಿದ್ಧಪಡಿಸಲಾಗುವುದು ಎಂದು ಡಿಸಿ ಹೇಳಿದರು.
ಮೇಲ್ನೋಟಕ್ಕೆ ಇದು ತಾಂತ್ರಿಕ ದೋಷದಿಂದ ಸ್ಪೋಟಗೊಂಡಿರುವಂತಿದೆ, ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದು, ನಿಖರ ಕಾರಣಗಳ ವರದಿ ನೀಡಲಿದ್ದಾರೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಅಗ್ನಿ ಶಾಮಕ ,ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿಸಿದ ಆಸ್ಪತ್ರೆಯ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದಿದ್ದಾರೆ.
ಶಾಸಕ ಸಮರ್ಥ್ ಶಾಮನೂರು ಭೇಟಿ
ದಾವಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಮೂರನೇ ಮಹಡಿಯ ಇಎನ್ಟಿ ಆಪರೇಷನ್ ಥಿಯೇಟರ್‌ನಲ್ಲಿ ಆಕ್ಸಿಜನ್ ಹಾಗೂ ನೈಟ್ರಸ್ ಆಕ್ಸೈಡ್ ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಿದರು.
ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿ. ಕರ್ತವ್ಯದಲ್ಲಿದ್ದ ವೈದ್ಯರು ಹಾಗೂ ಸಿಬ್ಬಂದಿ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಶಾಸಕ ಸಮರ್ಥ್ ಶಾಮನೂರು ಮೆಚ್ಚುಗೆ ವ್ಯಕ್ತಪಡಿಸಿದರು.
ಅಗ್ನಿ ಅವಘಡದಿಂದ ಹಾನಿಗೊಳಗಾದ ಆಪರೇಷನ್ ಥಿಯೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಪರಿಶೀಲಿಸಿದ ಅವರು, ಘಟನೆಗೆ ನಿಖರ ಕಾರಣ ಪತ್ತೆಹಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಆಸ್ಪತ್ರೆಯಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಘಟನೆ ಕುರಿತು ಶಾಸಕ ಸಮರ್ಥ್ ಶಾಮನೂರು ಅವರಿಗೆ ವಿವರವಾದ ಮಾಹಿತಿ ನೀಡಿದರು. ಆಸ್ಪತ್ರೆಯಲ್ಲಿನ ಚಿಕಿತ್ಸೆ ಹಾಗೂ ಸಾರ್ವಜನಿಕ ಸೇವೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.


