ಚಿಕ್ಕಬಳ್ಳಾಪುರದ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಧರ್ಮಾವರಂನ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಜ್ಜಿಯ ಕೊಲೆಗಾರನ ಕಾಲಿಗೆ ಪೊಲೀಸ್ ಗುಂಡೇಟು
ಶಿವಮೊಗ್ಗ ನಗರದ ಮಿಳಘಟ್ಟದ ಆನಂದರಾವ್ ಬಡಾವಣೆಯಲ್ಲಿ ಮೊಮ್ಮಗನೊಬ್ಬ ಅಜ್ಜಿಯನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಸುಶೀಲಮ್ಮ (65) ಎಂಬವರನ್ನು ಆರೋಪಿ ಮೊಮ್ಮಗ ಕಿಶೋರ್ (26) ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ, ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜಪೇಯಿ ಬಡಾವಣೆಯಲ್ಲಿ ಆತನನ್ನು ಹಿಡಿಯಲು ತೆರಳಿದ್ದಾಗ ಲಾಂಗ್‌ನಿಂದ ಪೊಲೀಸ್ ಸಿಬ್ಬಂದಿ ಗಣೇಶ್ ಮೇಲೆ ಹಲ್ಲೆ ನಡೆಸಿದ್ದಾನೆ.
ಇನ್‌ಸ್ಪೆಕ್ಟರ್ ಆಗ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.


