ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ ಗ್ರಾಮದಲ್ಲಿ ಶ್ರೀ ಭೂಮಿ ಸಿದ್ದೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಮೈಕ್ರೋ ಫೈನಾನ್ಸ್ ನವರು ಬಂದು ನಿನಗೆ ಕಿರುಕುಳ ನೀಡಿದರೆ ಹೆದರಬೇಡಿ. ರೌಡಿಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದರೆ ತಕ್ಷಣ ನನಗೆ ಕರೆ ಮಾಡಿ, ನಾನಿದ್ದೇನೆ. ನಿಮ್ಮ ಜೀವ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಜೀವ ತೆಗೆದುಕೊಳ್ಳುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ನಾನು 2018ರಲ್ಲಿ ಸಿಎಂ ಆಗುವ ಮೊದಲು ಮಂಡ್ಯ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸರಣಿ ಸಾವುಗಳು ನನಗೆ ಆಘಾತ ಮಾಡುತ್ತಿದ್ದವು. ನಾನು ಮಂಡ್ಯಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ರೈತರಲ್ಲಿ ಮನವಿ ಮಾಡಿದೆ. ಆಮೇಲೆ ನಾನು ₹25,000 ಕೋಟಿ ಸಾಲ ಮನ್ನಾ ಮಾಡಿದೆ. ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನಾನೇ ಸ್ವತಃ ರಾಷ್ಟ್ರಪತಿಗಳ ಬಳಿಗೆ ಹೋಗಿ ಕಾಯ್ದೆಗೆ ಅಂಕಿತ ಹಾಕಿಸಿಕೊಂಡು ಬಂದೆ ಎಂದು ಸಚಿವರು ಹೇಳಿದರು.
ಮೈಕ್ರೋ ಫೈನಾನ್ಸ್ ಉಪಟಳ ಕೆಲವು ತಿಂಗಳ ಹಿಂದೆ ಚಾಮರಾಜನಗರದಲ್ಲಿ ಆರಂಭವಾಯಿತು. ರಾಜ್ಯದ ಉದ್ದಗಲಕ್ಕೂ ಸರಣಿ ಸಾವುಗಳು ಸಂಭವಿಸುತ್ತಿವೆ. ರಾಜ್ಯದ ಕಾನೂನು ಸಚಿವರು ಇನ್ನೂ ಸಮಗ್ರವಾಗಿ ಚಿಂತನೆ ಮಾಡುತ್ತಿದ್ದಾರೆ. ಸರಕಾರ ಮೈಕ್ರೋ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಲು ಮೀನಮೇಷ ಎಣಿಸುತ್ತಿದೆ. ಇದು ಯಾಕೆ ಅನುಮಾನ ಕಾಡುತ್ತಿದೆ ಎಂದರು.
ರಾಜಕಾರಣಕ್ಕೆ ಪರಸ್ಪರ ಜಗಳ ಬೇಡ. ನಿಮ್ಮ ಮತ ನಿಮ್ಮ ಇಷ್ಟ. ರಾಜಕಾರಣ ನಿತ್ಯದ ಕೆಲಸವಾಗಬಾರದು ಎಂದು ಕುಮಾರಸ್ವಾಮಿ ಹೇಳಿದರು.