Menu

ನೀಟ್‌ ಅಕ್ರಮ ವಿರುದ್ಧ ನಿರಶನ: ವಾಂಗ್ಚುಕ್‌ಗೆ ಬಲವಂತವಾಗಿ ಆಹಾರ ನೀಡಲು ಕೋರಿ ಕೋರ್ಟ್‌ಗೆ ಪಿಐಎಲ್‌

ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಸಮರ್ಪಕ ತನಿಖೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಜೊತೆಗೆ ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಉಪವಾಸ ಮಾಡುತ್ತಿರುವ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರಿಗೆ ಬಲವಂತವಾಗಿ ಆಹಾರ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದೆ, ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ವೈದ್ಯರ ಸಲಹೆಯನ್ವಯ ಬಲವಂತವಾಗಿ ಆಹಾರ ನೀಡುವಂತೆ ನಿರ್ದೇಶನ ಕೋರಿ ವಕೀಲ ರಾಕೇಶ್ ಕುಮಾರ್ ಸೈನಿ ದೆಹಲಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದ ಬಳಿಕ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಾಂಗ್ಚುಕ್‌, ಜೂನ್ 28 ರಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಉಪವಾಸದಿಂದ ಆರೋಗ್ಯ ಹದಗೆಟ್ಟು, 8.5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ವೈದ್ಯಕೀಯ ಚಿಕಿತ್ಸೆ ವಿಳಂಬವಾದರೆ ಜೀವಕ್ಕೆ ಅಪಾಯ ಸಾಧ್ಯತೆ ಇದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಚಿಕಿತ್ಸೆ ನೀಡುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ವೈದ್ಯರ ಸಲಹೆ ಮತ್ತು ಕಾನೂನು ಪ್ರಕ್ರಿಯೆ ಅನುಸರಿಸಿ ಬಲವಂತವಾಗಿ ಆಹಾರ ನೀಡಲು ಅವಕಾಶ ಕಲ್ಪಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ. ದೆಹಲಿ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಜುಲೈ 16ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಅರ್ಜಿಗೆ ಸಂಬಂಧಿಸಿದಂತೆ ಉತ್ತರವನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.

ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ದೇಶಾದ್ಯಂತ ಆತಂಕ ವ್ಯಕ್ತವಾಗಿದ್ದು, ಪರಿಸರ ಸಂಘಟನೆಗಳು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *