ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು.
ಸೋಮವಾರ ಆರಂಭವಾದ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಕುಂಭಮೇಳದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದು, ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದರು.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿ ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದರು. ಈ ವೇಳೆ ನಾನು ಹೇಳಿದ ಸಂಖ್ಯೆಯಲ್ಲಿ ತಪ್ಪು ಇರಬಹುದು. ನೀವು ಸರಿಯಾದ ಲೆಕ್ಕ ಕೊಡಿ ಎಂದು ಆಗ್ರಹಿಸಿದರು.
ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ರಾಜ್ಯಸಭಾ ಸದಸ್ಯೆ ಜಯಾಬಚ್ಚನ್, ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನು ಯಾರು ಖಚಿತಪಡಿಸಬೇಕು? ಸರ್ಕಾರವನ್ನು ಪ್ರಶ್ನಿಸಿದರೆ ಯಾವುದೇ ಉತ್ತರ ನೀಡುತ್ತಿಲ್ಲ. ಸರಿಯಾದ ಲೆಕ್ಕ ಕೊಡುತ್ತಿಲ್ಲ ಎಂದು ಆರೋಪಿಸಿದರು.
ನಿಮ್ಮ ಆರೋಪಕ್ಕೆ ಪೋಸ್ಟ್ ಮಾರ್ಟಂ ರಿಪೊರ್ಟ್ ಅಥವಾ ಯಾವುದಾದರೂ ದಾಖಲೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಶವಗಳು ಲೆಕ್ಕಕ್ಕೆ ಸಿಗಬಾರದು ಎಂದು ನದಿಯಲ್ಲಿ ಎಸೆಯಲಾಗಿದೆ. ಇನ್ನು ಪೋಸ್ಟ್ ಮಾರ್ಟಂ ರಿಪೋರ್ಟ್ ಎಲ್ಲಿಂದ ಬರಬೇಕು ಎಂದು ಉತ್ತರಿಸಿದರು.