Menu

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಅಕ್ಷಮ್ಯ, ಪ್ರಧಾನಿ ಕ್ಷಮೆ ಯಾಚಿಸಬೇಕು: ರಾಹುಲ್ ಗಾಂಧಿ 

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಾಗೂ ಕಾಕ್ರೋಚ್‌  ಜನತಾ ಪಾರ್ಟಿ ಮುಖಂಡರು , ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಅಮಾನವೀಯ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ
ಅತ್ಯಂತ ಖಂಡನೀಯ ಎಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದು,  ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಕರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನದ ಆರಂಭಿಕ ದಿನದಂದು ನೀಟ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಶಿಕ್ಷಣ ಕ್ಷೇತ್ರದ ವ್ಯವಸ್ಥಿತ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಸಂಸತ್ತಿನತ್ತ ಮೆರವಣಿಗೆ ನಡೆಸಿದ್ದರು. ಈ ವೇಳೆ ಪೊಲೀಸರು ಭಾರಿ ಭದ್ರತೆ ನಿಯೋಜಿಸಿ ಲಾಠಿಚಾರ್ಜ್ ನಡೆಸಿದ್ದರು. ಈ ದೌರ್ಜನ್ಯವನ್ನು ಖಂಡಿಸಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ದೇಶದ ಇತಿಹಾಸದಲ್ಲೇ ಬಹುದೊಡ್ಡ ಯುವ-ವಿರೋಧಿ ಪ್ರಧಾನಿ ಎಂದು ಟೀಕಿಸಿದರು.

ದೆಹಲಿ ಬೀದಿಗಳಲ್ಲಿ ಪ್ರತಿಭಟಿಸುತ್ತಿರುವ ಯುವಕ-ಯುವತಿಯರು ಅಪರಾಧಿಗಳಲ್ಲ. ಅವರು ತಮ್ಮ ಮೂಲಭೂತ ಹಕ್ಕುಗಳಿಗಾಗಿ ಮತ್ತು ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ಶಾಂತಿಯುತವಾಗಿ ಧ್ವನಿ ಎತ್ತುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವುದು ಮತ್ತು ಅಶ್ರುವಾಯು ಪ್ರಯೋಗಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ, ಇದು ಭಾರತೀಯ ಸಂಸ್ಕೃತಿಗೆ ಸಂಪೂರ್ಣ ವಿರುದ್ಧವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷ ಸಂಸತ್ ಸದಸ್ಯರೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಈ ಗಂಭೀರ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ಕೋರಿದರು. ಆದರೆ ಸದನದಲ್ಲಿ ಚರ್ಚೆ ನಡೆಸಲು
ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ ಎಂದು ಸ್ಪೀಕರ್ ತಿಳಿಸಿರುವುದಾಗಿ ಮಾಧ್ಯಮಗಳಿಗೆ  ಮಾಹಿತಿ ನೀಡಿದರು.

ಸಂಸತ್ತಿನಲ್ಲಿ ದೇಶದ ಸತ್ಪ್ರಜೆಗಳ ಕುರಿತು ಚರ್ಚೆ ನಡೆಸಲು ಸರ್ಕಾರದ ಅನುಮತಿ ಕೋರಬೇಕಾದ ಪರಿಸ್ಥಿತಿ ಬಂದಿರುವುದು ಅತ್ಯಂತ ದುರದೃಷ್ಟಕರ ಎಂದು  ಟೀಕಿಸಿದರು. 152ಕ್ಕೂ ಹೆಚ್ಚು ಪತ್ರಿಕೆಗಳು ಸೋರಿಕೆಯಾಗಿದ್ದು 7.5 ಕೋಟಿಗೂ ಅಧಿಕ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಅಂಕಿಅಂಶಗಳ ಸಮೇತ ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡರು.

Related Posts

Leave a Reply

Your email address will not be published. Required fields are marked *