ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಅಪರಾಧಿಗಳ ತ್ವರಿತ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ಮತ್ತು ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ತಿಂಗಳಿಗೂ ಹೆಚ್ಚು ಕಾಲ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತಿದ್ದಂತೆಯೇ ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಯುವಜನತೆಯ ಭವಿಷ್ಯ ಮತ್ತು ಕ್ಷೇಮಾಭಿವೃದ್ಧಿಗಿಂತ ನಮಗೆ ಬೇರೇನೂ ಮುಖ್ಯವಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ಸಿಗುವಂತೆ ಮಾಡಲು ‘ಫಾಸ್ಟ್-ಟ್ರ್ಯಾಕ್’ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲೂ ಪ್ರಶ್ನೆಪತ್ರಿಕೆ ಲೀಕ್ ಆಗಿದೆ. ರಾಹುಲ್ ಗಾಂಧಿ ವಿಷಯಾಂತರ ಮಾಡುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ದೂರಿದ್ದಾರೆ. ಬಿಜೆಪಿ ಆಡಳಿತದ ಕಳೆದ 10 ವರ್ಷಗಳಲ್ಲಿ 150 ಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಕ್ಕೆ ನಡ್ಡಾ ಹೀಗೆ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆಗೂ ಸಿದ್ಧವಿದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲೂ ಪ್ರಶ್ನೆಪತ್ರಿಕೆ ಲೀಕ್ ಆಗಿದೆ. ರಾಹುಲ್ ಗಾಂಧಿ ವಿಷಯಾಂತರ ಮಾಡುತ್ತಿದ್ದಾರೆ. ಕೇಂದ್ರ
ಜವಾಬ್ದಾರಿಯುತ ಸರ್ಕಾರ. ತನಿಖೆ ನಡೆಸಿ ಸತ್ಯವನ್ನು ಸಾರ್ವಜನಿಕರಿಗೆ ಮತ್ತು ರಾಷ್ಟ್ರಕ್ಕೆ ಪ್ರಸ್ತುತಪಡಿಸುತ್ತದೆ ಎಂದು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಸದನದ ನಾಯಕನಾಗಿ ವಿರೋಧ ಪಕ್ಷವು ನಿರ್ಧರಿಸುವಷ್ಟು ಗಂಟೆಗಳ ಕಾಲ ನಾವು ಚರ್ಚೆಗೆ ಸಿದ್ಧರಿದ್ದೇವೆ ಎಂದಿದ್ದಾರೆ.


