ಸೌಜನ್ಯ ಕೇಸ್‌ಗೆ ಸಂಬಂಧಿಸಿದಂತೆ ಸಿಐಡಿ ವರದಿ ಟ್ರಾನ್ಸ್‌ಲೇಟ್ ಬಿಟ್ಟು ಮತ್ತೇನು ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ.
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ಕೋರ್ಟ್ ಕಟುವಾಗಿ ಟೀಕಿಸಿದೆ.
ತನಿಖಾಧಿಕಾರಿಗಳು ಸರಿಯಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಸಿಬಿಐ ಅನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಈ ಹಿಂದೆ ಮರುತನಿಖೆಗೆ ವಿರೋಧ ವ್ಯಕ್ತಪಡಿಸಿದ್ದ ಕರ್ನಾಟಕ ಸರ್ಕಾರ, ಇದೀಗ ತನ್ನ ನಿಲುವು ಬದಲಿಸಿ ಮರು ತನಿಖೆಗೆ ಬೆಂಬಲ ಸೂಚಿಸಿದೆ. ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿ, ನ್ಯಾಯಾಲಯದ ಸೂಚನೆಯ ಮೇರೆಗೆ ಅಗತ್ಯವಿದ್ದರೆ ಎಸ್‌ಐಟಿ ರಚಿಸಿ ತನಿಖೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿದೆ.
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ತನಿಖೆಯನ್ನು ಯಾವ ಸ್ವರೂಪದಲ್ಲಿ ನಡೆಸಬೇಕು ಎನ್ನುವುದರ ಕುರಿತು ತೀರ್ಪನ್ನು ನೀಡಬೇಕಿದೆ. ಆದೇಶದಲ್ಲಿ ಈ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.
ಧರ್ಮಸ್ಥಳ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದ ಸೌಜನ್ಯಾ,ಅಕ್ಟೋಬರ್ 9, 2012 ರಂದು ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ನಾಪತ್ತೆಯಾಗಿದ್ದರು. ಮರುದಿನಧರ್ಮಸ್ಥಳದ ನೇತ್ರಾವತಿ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ಅತ್ಯಾಚಾರ ನಡೆಸಿ, ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವುದು ದೃಢಪಟ್ಟಿತ್ತು.
ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸಿ ಸಂತೋಷ್ ರಾವ್ ಎಂಬಾತನನ್ನು ಪ್ರಮುಖ ಆರೋಪಿಯನ್ನಾಗಿ ಬಂಧಿಸಿದ್ದರು. , ಪೊಲೀಸರ ತನಿಖೆಯ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಮತ್ತು ಸಾರ್ವಜನಿಕರು ನಿಜವಾದ ಆರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಾರ್ವಜನಿಕ ಒತ್ತಡಕ್ಕೆ ಮಣಿದ ಸರ್ಕಾರ ಪ್ರಕರಣವನ್ನು ಮೊದಲು ಸಿಐಡಿ ತನಿಖೆಗೆ ಮತ್ತು ನಂತರ ಸಿಬಿಐ ತನಿಖೆಗೆ ವಹಿಸಿತ್ತು.


