Menu

ಭಾಲ್ಕಿಯ ಮಹಿಳೆಗೆ ಕೋವಿಡ್‌ ಸೋಂಕು: ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್

ಬೀದರ್ ಜಿಲ್ಲೆಯ ಭಾಲ್ಕಿಯ ಮಹಿಳೆಯೊಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲೂ ಆತಂಕ ಎದುರಾಗಿದೆ. ಸ್ಯಾಂಪಲ್ ಪರೀಕ್ಷೆಯ ವೇಳೆ ಸೋಂಕು ದೃಢಪಟ್ಟ ಬಳಿಕ ಮಹಿಳೆಯನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಸೋಂಕಿತ ಮಹಿಳೆಯ ಟ್ರಾವೆಲ್ ಹಿಸ್ಟರಿ ಹಾಗೂ ಇತ್ತೀಚಿನ ದಿನಗಳಲ್ಲಿ ಅವರು ಯಾರನ್ನೆಲ್ಲ ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಸಂಗ್ರಹಿಸುತ್ತಿದೆ. ಸೋಂಕಿತ ಮಹಿಳೆಯ ಕುಟುಂಬ ಸದಸ್ಯರು ಹಾಗೂ ಮನೆಯಲ್ಲಿದ್ದ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಮಹಿಳೆಯ ಸಂಪರ್ಕದಲ್ಲಿದ್ದ ಸಂಬಂಧಿಕರು, ಸ್ನೇಹಿತರು ಮತ್ತು ಇತರರಿಗೆ ಕೂಡ ಪರೀಕ್ಷೆ ನಡೆಸುವ ಪ್ರಕ್ರಿಯೆ ಆರಂಭಗೊಂಡಿದೆ.

ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ತಂಡ ಸೋಂಕಿತೆಯ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೋಂಕಿನ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆತಂಕ ಪಡುವ ಅಗತ್ಯವಿಲ್ಲ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ. ಜ್ವರ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಸೇರಿದಂತೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದೆ.

ಉಪಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಉಪಹಾರ ಸೇವಿಸಿದ ಕೆಲವೇ ಹೊತ್ತಿನಲ್ಲಿ ಹಲವು ವಿದ್ಯಾರ್ಥಿಗಳು ಹೊಟ್ಟೆ ನೋವು ಹಾಗೂ ವಾಂತಿ ಸಮಸ್ಯೆಯಿಂದ ಬಳಲುತ್ತಿದ್ದರು. ಶಾಲಾ ಆಡಳಿತ ತಕ್ಷಣವೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಜೀವಕ್ಕೆ ಅಪಾಯ ಇಲ್ಲ ವೈದ್ಯರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ವಸತಿ ನಿಲಯದ ಅಡುಗೆಮನೆ, ಆಹಾರ ಸಂಗ್ರಹಣಾ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿದ್ದಾರೆ. ಉಪಹಾರ ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.

Related Posts

Leave a Reply

Your email address will not be published. Required fields are marked *