ಪಶ್ಚಿಮ ಘಟ್ಟದಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಬೆಟ್ಟವನ್ನು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ, ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಿಕ್ಕಮಗಳೂರು ಜಿಲ್ಲಾಧಿಕಾರಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸೇರಿದಂತೆ ಇತರ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ, ಪ್ರಕರಣದ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಜಯ್ನಾ ಕೊಠಾರಿ ವಾದ ಮಂಡಿಸಿದರು.
ವನ್ಯಜೀವಿ (ಸಂರಕ್ಷಣಾ) ಕಾಯ್ದೆ–1972ರ ಸೆಕ್ಷನ್ 36ಎ ಅನ್ವಯ ಮುಳ್ಳಯ್ಯನಗಿರಿ ಬೆಟ್ಟದ 14 ಸಾವಿರ ಎಕರೆ ಪ್ರದೇಶವನ್ನು ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸುವಂತೆ ಚಿಕ್ಕಮಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಯು ರಾಜ್ಯ ಸರ್ಕಾರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಂರಕ್ಷಿತ ಪ್ರದೇಶದ ವ್ಯಾಪ್ತಿಯನ್ನು 14 ಸಾವಿರ ಎಕರೆಯಿಂದ 10 ಸಾವಿರ ಎಕರೆಗೆ ಇಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕವನ್ನು ಅರ್ಜಿದಾರರು ವ್ಯಕ್ತಪಡಿಸಿದ್ದಾರೆ.
ಮುಳ್ಳಯ್ಯನಗಿರಿ ಬೆಟ್ಟದ ಇಡೀ ಪ್ರದೇಶವನ್ನು ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸಬೇಕು, ನಿರ್ವಹಣೆಗೆ ಪ್ರತ್ಯೇಕ ಸಮಿತಿ ರಚಿಸಬೇಕು ಹಾಗೂ ಬೆಟ್ಟದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳು ಮತ್ತು ಅವುಗಳಿಗೆ ನೀಡಲಾಗುತ್ತಿರುವ ಹಣಕಾಸಿನ ನೆರವು ಕೂಡಲೇ ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.


