ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದ್ದು, 30 ಸ್ಥಳಗಳಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳು ಹಾಗೂ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲಿಯೂ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿ ವಾಸಿಸುತ್ತಿರುವ ವ್ಯಕ್ತಿಗಳು ಹಾಗೂ ಮಹಿಳೆಯರ ಗುರುತಿನ ದಾಖಲೆಗಳನ್ನು ಪರಿಶೀಲಿಸಲಾಗಿದೆ.
ಅನುಮಾನಾಸ್ಪದವಾಗಿ ಕಂಡುಬಂದ 40 ಮಂದಿಯನ್ನು ವಶಕ್ಕೆ ಪಡೆದು ಅವರ ದಾಖಲೆಗಳ ಬಗ್ಗೆ ವಿಚಾರಣೆ ನಡೆಸಲಾಗಿದೆ.ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ವ್ಯಕ್ತಿಗಳು ನೀಡಿದ ಮಾಹಿತಿ ಮತ್ತು ದಾಖಲೆಗಳಲ್ಲಿರುವ ವಿವರಗಳು ಪರಸ್ಪರ ಹೊಂದಿಕೆಯಾಗುತ್ತವೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.
ದಾಖಲೆಗಳಲ್ಲಿ ಗೊಂದಲ ಕಂಡುಬಂದಿರುವವರು ಅಥವಾ ತಮ್ಮ ವಿಳಾಸ, ಸ್ವಂತ ಊರು ಹಾಗೂ ಇತರ ಮಾಹಿತಿಯ ಬಗ್ಗೆ ಸ್ಪಷ್ಟ ಉತ್ತರ ನೀಡದವರನ್ನು ಪೊಲೀಸ್ ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.
ಅನುಮಾನಾಸ್ಪದ ವ್ಯಕ್ತಿಗಳ ಸ್ವಂತ ಊರು, ಪೋಸ್ಟ್ ಆಫೀಸ್ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ವಿವರ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಅಗತ್ಯವಿದ್ದಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ಮಾಹಿತಿ ಪರಿಶೀಲಿಸಲಾಗುತ್ತಿದೆ. ದಾಖಲೆಗಳಲ್ಲಿರುವ ವ್ಯಕ್ತಿಗಳ ವಿವರ ನೈಜವೇ ಎಂಬ ಬಗ್ಗೆಯೂ ಪೊಲೀಸರು ತೀವ್ರ ತಪಾಸಣೆ ನೆಸುತ್ತಿದ್ದಾರೆ.
ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಈ ಕುರಿತು ಮಾತಾನಾಡಿ, ಪೊಲೀಸ್ ಕಮಿಷನರ್ ಸೂಚನೆಯನ್ವಯ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ವಿದೇಶಿ ಪ್ರಜೆಗಳು ಪತ್ತೆಯಾದರೆ ಅವರ ವೀಸಾ, ಪಾಸ್‌ಪೋರ್ಟ್ ಹಾಗೂ ಭಾರತದಲ್ಲಿ ವಾಸಿಸಲು ಅಗತ್ಯವಿರುವ ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಅನುಮಾನ ಕಂಡುಬಂದಲ್ಲಿಪರಿಶೀಲನೆಗಾಗಿ ಸಂಬಂಧಪಟ್ಟವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಮುಂದೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾನೂನುಬಾಹಿರವಾಗಿ ಭಾರತದಲ್ಲಿ ನೆಲೆಸಿರುವುದು ಅಧಿಕೃತ ಪರಿಶೀಲನೆಯಲ್ಲಿ ದೃಢಪಟ್ಟರೆ, ಸಂಬಂಧಪಟ್ಟ ಕಾನೂನು ಹಾಗೂ ವಲಸೆ ನಿಯಮಗಳ ಅನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಹ ವಿದೇಶಿ ಪ್ರಜೆಗಳನ್ನು ಅವರ ದೇಶಕ್ಕೆ ವಾಪಸ್ ಕಳುಹಿಸುವ ಕ್ರಮ ಕೈಗೊಳ್ಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.


