Menu

ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಸಾಧ್ಯವಿಲ್ಲ: ಸುಪ್ರೀಂಗೆ ರಾಜ್ಯ ಅಫಿಡವಿಟ್‌

ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.  ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರ ನಿಲುವನ್ನು ಸ್ಪಷ್ಟಪಡಿಸಿದೆ.

ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶದ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ. ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಸೂಕ್ತ ಸುರಕ್ಷತಾ ವ್ಯವಸ್ಥೆಗಳಿಲ್ಲ. ಕಾರುಗಳಿಗೆ ಹೋಲಿಸಿದರೆ ದ್ವಿಚಕ್ರ ವಾಹನಗಳಲ್ಲಿ ಅಪಘಾತಗಳು ಸಂಭವಿಸಿದಾಗ ಪ್ರಾಣಾಪಾಯದ ಪ್ರಮಾಣ ಹೆಚ್ಚಾಗಿರುತ್ತದೆ. ಈ ವಾಹನಗಳಿಗೆ ಯಾವುದೇ ಅಧಿಕೃತ ವಿಮಾ ರಕ್ಷಣೆ ಇರುವುದಿಲ್ಲ. ಅಪಘಾತ ಸಂಭವಿಸಿದಲ್ಲಿ ಪ್ರಯಾಣಿಕರು ಯಾವುದೇ ಪರಿಹಾರ ಪಡೆಯುವಂತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ‘ಬೈಕ್ ಟ್ಯಾಕ್ಸಿ’ ಸಂಬಂಧ ವ್ಯಾಖ್ಯಾನ, ನಿಯಮಾವಳಿ ಇಲ್ಲ. ಈ ಕಾರಣಗಳಿಂದಾಗಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಕಾನೂನುಬದ್ಧವಾಗಿ ಸಾಧ್ಯವಿಲ್ಲ ಎಂದು ಸರ್ಕಾರ ವಾದಿಸಿದೆ.

ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಜಾರಿ ವಿಭಾಗದ ಕಾರ್ಯಾಚರಣೆ ಮುಂದುವರಿದಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿ ಆ್ಯಪ್ ಆಧಾರಿತ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ದಾಳಿ ಮಾಡುತ್ತಿದ್ದಾರೆ.

ಬೆಂಗಳೂರಿನ ಕೋರಮಂಗಲ ಆರ್‌ಟಿಒ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಮಂಗಳವಾರ ಒಂದೇ ದಿನ ಅಧಿಕಾರಿಗಳು 85ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಜಪ್ತಿ ಮಾಡಿದ್ದಾರೆ. ಈ ಕಾರ್ಯಾಚರಣೆಗೆ ಸಾರಿಗೆ ಇಲಾಖೆಯ 11 ವಿಶೇಷ ತಂಡ ಕಾರ್ಯಾಚರಿಸುತ್ತಿದೆ.

Related Posts

Leave a Reply

Your email address will not be published. Required fields are marked *