ಕಾವೇರಿ ನೀರು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕಾವೇರಿ, ಮೇಕೆದಾಟು, ಮಹಾದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಬಂದ್ ನಡೆಯಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ, ಮೆರವಣಿಗೆ ಹಾಗೂ ಧರಣಿ ನಡೆಯುವ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಇರುವುದಿಲ್ಲ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಕೆಲವೆಡೆ ಸಂಚಾರ ದಟ್ಟಣೆ ಉಂಟಾಗಬಹುದು. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರೆ ಅಥವಾ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಬಹುದು. ಅಗತ್ಯವಾದರೆ ಕೆಲವು ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ಖಾಸಗಿ ಬಸ್‌ಗಳು, ಆಟೋ ಹಾಗೂ ಕ್ಯಾಬ್‌ಗಳ ಸಂಚಾರದಲ್ಲಿ ವ್ಯತ್ಯ ಆಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಪ್ರದೇಶಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ಸಂಚಾರ ದಟ್ಟಣೆ ಬಗ್ಗೆ ಸಾರ್ವಜನಿಕರು ಗಮನ ಹರಿಸಬೇಕಿದೆ.
ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಮೇಲೆ ಬಂದ್ ಪ್ರಭಾವ ಬೀರಬಹುದು. ಬಂದ್ ದಿನ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಕರ್ನಾಟಕ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಸ್ಪಷ್ಟಪಡಿಸಿದೆ.


