ಕಾಕ್ರೋಚ್ ಜನತಾ ಪಾರ್ಟಿ ಜೊತೆ ಗುರುತಿಸಿಕೊಂಡವರ ಚಟುವಟಿಕೆಗಳ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ, ಭಾರತೀಯ ವಕೀಲರ ಪರಿಷತ್ತು ಮತ್ತು ಸಿಬಿಐಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ.
ಮೇ ತಿಂಗಳಲ್ಲಿ ನ್ಯಾಯಾಲಯದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಸಿಜೆಪಿ ಅಸ್ತಿತ್ವಕ್ಕೆ ಬಂದಿದ್ದು, ನೀಟ್-ಯುಜಿ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿತ್ತು.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ವಕೀಲ ರಾಜಾ ಚೌಧರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ನೋಟಿಸ್ ನೀಡಿದೆ. ಪ್ರಕರಣದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಕೂಡ ಪ್ರತಿವಾದಿಯನ್ನಾಗಿ ಮಾಡಲಾಗಿದೆ.
ಕಲಾಪದ ವೇಳೆ ನ್ಯಾಯಮೂರ್ತಿಗಳು ಮಾಡುವ ಟೀಕೆಗಳು ಅಥವಾ ಹೇಳಿಕೆಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ದುರ್ಬಳಕೆ ಮಾಡಿಕೊಳ್ಳುವುದು, ಟ್ರೇಡ್‌ಮಾರ್ಕ್ ಆಗಿ ಪರಿವರ್ತಿಸುವುದು ಮತ್ತು ಹಣಗಳಿಕೆಗಾಗಿ ಪ್ರಸಾರ ಮಾಡುತ್ತಿರುವ ಗಂಭೀರ ವಿಚಾರಗಳನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.
ಮೇ 15ರ ಕಲಾಪದ ಆಯ್ದ ಭಾಗಗಳನ್ನು ಕತ್ತರಿಸಿ, ಮೀಮ್‌ಗಳು, ವಿಡಿಯೊಗಳು, ಮಿಮಿಕ್ರಿ ಹಾಗೂ ರಾಜಕೀಯ ಪ್ರಚಾರ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದ ವಕೀಲರು ಆಳವಾದ ತನಿಖೆ ಅಗತ್ಯವಿದೆ ಎಂದು ಪೀಠದ ಗಮನಕ್ಕೆ ತಂದರು.
ಸಂಜಯ್ ದುಬೆ ಎಂಬವರು ಸಲ್ಲಿಸಿದ್ದ ಮತ್ತೊಂದು ಅರ್ಜಿಯಲ್ಲಿ ನಕಲಿ ವಕೀಲರು, ನ್ಯಾಯಾಲಯದ ಪ್ರಕ್ರಿಯೆಯ ದುರ್ಬಳಕೆ ಹಾಗೂ ವೃತ್ತಿಪರ ಮೌಲ್ಯಗಳ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸುವ ಸಂದರ್ಭದಲ್ಲಿ ಸಿಜೆಐ ಅವರು ಈ ಕಾಕ್ರೋಚ್ ಪದವನ್ನು ಬಳಸಿದ್ದರು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಮೇ 15ರ ಬಳಿಕ ನ್ಯಾಯಾಲಯದ ಕಲಾಪಗಳ ವೀಡಿಯೊಗಳ ತಿರುಚಿ ಮೀಮ್‌ಗಳನ್ನಾಗಿ ಮಾಡಿ ಆರ್ಥಿಕ ಲಾಭಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಪ್ರವೃತ್ತಿ ಹೆಚ್ಚಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.


