ಚಾಮರಾಜನಗರದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಅರಣ್ಯಾಧಿಕಾರಿಗಳ ಎನ್ಕೌಂಟರ್ನಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಥಳೀಯರು ಅರಣ್ಯ ಇಲಾಖೆ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದಾರೆ. ಬೇಟೆಗಾರರನ್ನು ಸೆರೆಹಿಡಿದು ನಂತರ ಅವರನ್ನು ಕೊಂದಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅರಣ್ಯ ಇಲಾಖೆ ವಿರುದ್ಧ ಇಲ್ಲಿನ ನಿವಾಸಿಗಳು ರೊಚ್ಚಿಗೆದ್ದಿದ್ದು, ಉಪವಲಯ ಅರಣ್ಯಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದಾಗ ಬೇಟೆಗಾರರು ಏಕಾಏಕಿ ಗುಂಡು ಹಾರಿಸಿದ್ದಾರೆ. ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ.
ಮೃತರನ್ನು ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಒಬ್ಬ ಅರಣ್ಯ ಸಿಬ್ಬಂದಿ ಗಾಯಗೊಂಡಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಬೇಟೆಗಾರರು ಕಾಡುಪ್ರಾಣಿಯನ್ನು ಕೊಂದು ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಒಂದು ನಾಡ ಬಂದೂಕು, ಒಂದು ಜಿಂಕೆ ಮೃತದೇಹವನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಮೃತಪಟ್ಟ ಬೇಟೆಗಾರರ ಶವವವನ್ನು ಮರಣೋತ್ತರ ಪರೀಕ್ಷೆಗೆ ಮೈಸೂರು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಲಬುರ್ಗಿಯಲ್ಲಿ ಮಾತಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ , ಚಾಮರಾಜನಗರದಲ್ಲಿ ಮೂವರ ಎನ್ಕೌಂಟರ್ ಆಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.


