ಕಾವೇರಿ ನದಿಯಿಂದ ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್ ನೀರನ್ನು ೧೫ ದಿನ ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಮಂಡ್ಯ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸ್ನಾನಘಟ್ಟದ ಬಳಿ ಪ್ರತಿಭಟನೆ ಆರಂಭಗೊಂಡಿದೆ, ರಾಜ್ಯ ಸರ್ಕಾರವು ರೈತರಿಗೆ ಅನ್ಯಾಯ ಮಾಡುತ್ತಿದೆ ಮತ್ತು ತಮಿಳುನಾಡಿಗೆ ನೀರನ್ನು ಹರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಬೆಳೆಗಳಿಗೆ ನೀರಿಲ್ಲದೆ ರೈತರು ನಷ್ಟ ಅನುಭವಿಸಿದ್ದಾರೆ. ಮುಂದಿನ ಬೆಳೆಗಳಿಗೂ ನೀರಿನ ಕೊರತೆ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕಾವೇರಿ ಸಮಿತಿಗಳ ಆದೇಶಗಳು ಅವೈಜ್ಞಾನಿಕವಾಗಿದ್ದು, ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ಮಂಡ್ಯ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮತ್ತು ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೊಡಗಿನಲ್ಲಿ ಮಳೆ ತೀವ್ರ
ಜಿಲ್ಲೆಯಲ್ಲಿ ಮಳೆಯ ಅಬ್ಬರ ಈವ್ರಗೊಂಡಿದ್ದು, ಜನ ಜೀವನ ತೊಂದರೆಗೆ ಸಿಲುಕಿದೆ. ಭಾಗಮಂಡಲದ ತ್ರಿವೇಣಿ ಸಂಗಮವು ಸಂಪೂರ್ಣ ಜಲಾವೃತಗೊಂಡಿದೆ.ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ತಲಕಾವೇರಿ ಸುತ್ತಮುತ್ತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ರಸ್ತೆಯ ಮೇಲೆ ಒಂದು ಅಡಿಗೂ ಹೆಚ್ಚು ನೀರು ನಿಂತಿದೆ. ನಾಪೋಕ್ಲು ರಸ್ತೆಯ ಸಂಪರ್ಕ ಕಡಿತಗೊಂಡಿದೆ. ಪ್ರವಾಹದಿಂದಾಗಿ ರಸ್ತೆಗಳಲ್ಲಿ ನೀರು ತುಂಬಿರುವ ಕಾರಣ ಪಾದಚಾರಿಗಳು ಅನಿವಾರ್ಯವಾಗಿ ಮೇಲ್ಸೇತುವೆಗಳನ್ನು ಬಳಸುತ್ತಿದ್ದಾರೆ. ಜಲಾವೃತಗೊಂಡಿರುವ ರಸ್ತೆಗಳು ಮತ್ತು ನದಿ ಸಂಗಮದ ಪ್ರದೇಶಗಳಲ್ಲಿ ಪರಿಸ್ಥಿತಿ ಯಥಾಸ್ಥಿತಿಯಲ್ಲಿದೆ. ಜಿಲ್ಲಾಡಳಿತವು ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ.


