ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನ ಹಾಗೂ ಮರುಪರಿಶೀಲನೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ‘ಗ್ರಾಮ ಗ್ಯಾರಂಟಿ ಸಮಿತಿ’ ರಚಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಬಸ್ಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಮಂಗಳೂರು ಹಾಗೂ ಉಡುಪಿಗೆ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ಗಳನ್ನು ನಿಯೋಜಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಮತ್ತಷ್ಟು ಸುಧಾರಿಸಲಿದೆ ಎಂದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರು ಮಂದಿ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ಇಬ್ಬರು ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗದಿಂದ ತಲಾ ಒಬ್ಬರನ್ನು ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗುವುದು ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮನೆ–ಮನೆ ಸಮೀಕ್ಷೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಲಾಗುವುದು. ಅರ್ಹ ಫಲಾನುಭವಿಗಳಿಂದ ಅಗತ್ಯ ಅರ್ಜಿಗಳನ್ನು ಭರ್ತಿ ಮಾಡಿಸಿಕೊಳ್ಳಲಾಗುವುದು ಎಂದು ರೇವಣ್ಣ ತಿಳಿಸಿದರು.
ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತುಗಳು ಖಜಾನೆಯಿಂದ ಹಣ ಬಿಡುಗಡೆಯಾಗದ ಕಾರಣ ಬಾಕಿಯಾಗಿವೆ. ಅರ್ಹ ಫಲಾನುಭವಿಗಳಿಗೆ ಬಾಕಿ ಕಂತುಗಳನ್ನು ಶೀಘ್ರದಲ್ಲೇ ಪಾವತಿಸಲಾಗುವುದು. ಗ್ಯಾರಂಟಿ ಯೋಜನೆಗಳಡಿ ಮೃತರ ಖಾತೆಗಳಿಗೆ ಜಮೆಯಾಗಿದ್ದ ಒಟ್ಟು ₹117 ಕೋಟಿ ಪೈಕಿ ₹30 ಕೋಟಿಯನ್ನು ಸರ್ಕಾರ ವಾಪಸ್ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಖಾತೆಗಳಿಗೆ ಜಮೆಯಾಗಿದ್ದ ₹3.34 ಕೋಟಿಯಲ್ಲಿ ₹1.43 ಕೋಟಿಯನ್ನು ವಾಪಸ್ ಪಡೆಯಲಾಗಿದೆ ಎಂದರು.
ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಈವರೆಗೆ ₹1.47 ಲಕ್ಷ ಕೋಟಿ ಹಣವನ್ನು ಜನರಿಗೆ ತಲುಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.23 ಕೋಟಿ ಮಹಿಳೆಯರಿಗೆ ₹76,951 ಕೋಟಿ, ಗೃಹಜ್ಯೋತಿ ಯೋಜನೆಗೆ ₹28,759.54 ಕೋಟಿ, ಯುವನಿಧಿ ಯೋಜನೆಗೆ ₹1,203 ಕೋಟಿ ಹಾಗೂ ಶಕ್ತಿ ಯೋಜನೆಗೆ ₹21,233 ಕೋಟಿ ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಗೆ ಪರ್ಯಾಯವಾಗಿ ಶೀಘ್ರದಲ್ಲೇ ‘ಇಂದಿರಾ ಕಿಟ್’ ವಿತರಿಸಲಾಗುವುದು ಎಂದು ಹೇಳಿದರು.


