Thursday, September 03, 2026
Menu

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ನಿತಿನ್‌ ಗಡ್ಕರಿ ರಾಜ್ಯಗಳಿಗೆ ಮನವಿ

ಖಾಸಗಿ ದ್ವಿಚಕ್ರ ವಾಹನ ಮಾಲೀಕರು ಬೈಕ್‌ ಟ್ಯಾಕ್ಸಿ ಸೇವೆ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.

ದೇಶದ ಹಲವು ರಾಜ್ಯಗಳಲ್ಲಿ ಖಾಸಗಿ ದ್ವಿಚಕ್ರ ವಾಹನಗಳ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಾರಿಗೆ ರಾಜ್ಯಗಳ ವ್ಯಾಪ್ತಿಗೆ ಬರುವ ವಿಷಯ ಆಗಿರುವುದರಿಂದ, ರಾಜ್ಯಗಳಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಜಾರಿಗೆ ತರಬೇಕೇ ಅಥವಾ ಬೇಡವೇ ಎಂಬುದನ್ನ ರಾಜ್ಯ ಸರ್ಕಾರಗಳೇ ನಿರ್ಧರಿಸಬೇಕು ಎಂದು ಗಡ್ಕರಿ ಹೇಳಿದ್ದಾರೆ.

ಬೈಕ್‌ ಟ್ಯಾಕ್ಸಿ ಸೇವೆಯು ಜನರಿಗೆ ಹೊಸ ಆದಾಯದ ಮೂಲವಾಗಬಹುದು. ಖಾಸಗಿ ದ್ವಿಚಕ್ರ ವಾಹನ ಬಳಸಿಕೊಂಡು ಜನರು ಹೆಚ್ಚುವರಿ ಆದಾಯ ಗಳಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬೈಕ್‌ ಟ್ಯಾಕ್ಸಿ ಸೇವೆಗಳನ್ನು ಉತ್ತೇಜಿಸುವುದರಿಂದ ಎಂಟು ಕೋಟಿ ಜನರಿಗೆ ಉದ್ಯೋಗ ಸಿಗಲಿದೆ. ಉದ್ಯೋಗಾವಕಾಶ ಕಡಿಮೆ ಇರುವ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಪ್ರಯೋಜನಕಾರಿಯಾಗಿದೆ. ಬೈಕ್‌ ಟ್ಯಾಕ್ಸಿ ಸೇವೆ ಆರಂಭಿಸಲು ಅಗತ್ಯವಿರುವ ಪರವಾನಗಿ, ವಿಮೆ ಹಾಗೂ ಇತರ ನಿಯಮಗಳು ಆಯಾ ರಾಜ್ಯಗಳ ಕಾನೂನು ಮತ್ತು ನಿಯಮಾವಳಿಗಳ ಮೇಲೆ ಅವಲಂಬಿತವಾಗಿರುತ್ತವೆ ಎಂದಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅದಕ್ಕಾಗಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲು ಸಿದ್ಧತೆ ನಡೆಸುತ್ತಿದೆ ಎಂದು ಎಚ್ಚರಿಸಿದ್ದಾರೆ. ಚಾಲಕರಿಗೆ ಸುರಕ್ಷಿತ ವಾಹನ ಚಾಲನೆಯ ಕುರಿತು ಸೂಕ್ತ ಶಿಕ್ಷಣ ಮತ್ತು ತರಬೇತಿ ನೀಡುವ ಅಗತ್ಯವೂ ಇದೆ. ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಚಾಲಕರ ಆರೋಗ್ಯ ತಪಾಸಣೆ, ಸೂಕ್ತ ತರಬೇತಿ ಮತ್ತು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಸಮಾನ ಮಹತ್ವ ನೀಡಬೇಕಿದೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *