ಪ್ರಕರಣವೊಂದರ ಆರೋಪಿಗೆ ಜಾಮೀನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಸಿರುವ ಆರೋಪದಡಿ ಉಡುಪಿ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ.
ಬಂಟ್ವಾಳದ ಉಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿ ನೋಮಾನ್ ಎಂಬಾತನಿಗೆ ನ್ಯಾಯಾಲಯದಲ್ಲಿ ಜಾಮೀನು ನೀಡುವ ವೇಳೆ ಫಾರೂಕ್, ಪ್ರಶಾಂತ್ ಎಂಬವರ ಆಧಾರ್ ಕಾರ್ಡ್ಗೆ ಕೆಟಿ ಮೊಹಮ್ಮದ್ ಎಂಬಾತನ ಹೆಸರು ಮತ್ತು ವಿಳಾಸವನ್ನು ನಕಲಿಯಾಗಿ ಸೃಷ್ಟಿಸಿ ಆಧಾರ್ ಕಾರ್ಡನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಉಮರ್ ಫಾರೂಕ್ ಹಾಗೂ ನಿಶಾಂತ್ ಕುಮಾರ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


