Saturday, September 19, 2026
Menu

ಕಸ್ತೂರಿರಂಗನ್ ವರದಿ ಸಂಪೂರ್ಣ ರದ್ದಾಗಬೇಕು: ಆರಗ, ಕಿಮ್ಮನೆ ಒತ್ತಾಯ

ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು. ಮಲೆನಾಡಿನ ಜನರ ಬದುಕು ಮತ್ತು ಅಭಿವೃದ್ಧಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದರು.

ತೀರ್ಥಹಳ್ಳಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಸ್ತೂರಿರಂಗನ್ ಯೋಜನೆಗೆ ವಿದೇಶದಿಂದ ಹಣ ಬರುತ್ತಿದೆ ಎಂಬ ಆರೋಪಗಳಿವೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ವರದಿ ವಿಚಾರದಲ್ಲಿ ರಾಜಕೀಯ ಮಾಡದೆ, ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಿ ವಿರೋಧಿಸಬೇಕು ಎಂದರು.

ಯೋಜನೆ ಸಂಪೂರ್ಣ ರದ್ದಾದರೆ ಮಾತ್ರ ಮಲೆನಾಡಿನ ಜನರು ನೆಮ್ಮದಿಯಿಂದ ಬದುಕಲು ಸಾಧ್ಯ. ಸುಪ್ರೀಂ ಕೋರ್ಟ್ ಅಥವಾ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತೀರ್ಪು ನೀಡಬಹುದು. ಆದರೆ ಅದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕಾದದ್ದು ಸರ್ಕಾರ. ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತಿದ್ದು, ಕೇಂದ್ರ ಸರ್ಕಾರದಿಂದ ಒಂದು ವರ್ಷದ ಕಾಲಾವಕಾಶ ಪಡೆದು ಬಳಿಕ ಜಂಟಿ ಸರ್ವೇ ನಡೆಸಿ ವಾಸ್ತವ ಸ್ಥಿತಿಯನ್ನು ತಿಳಿಯಬೇಕು ಎಂದು ಹೇಳಿದರು.
ಕೆಲವೆಡೆ ರೈತರಿಗೆ ಹಕ್ಕುಪತ್ರ ನೀಡಿದ ಬಳಿಕವೂ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ. ಹಕ್ಕುಪತ್ರ ನೀಡಿದ ಬಳಿಕ ಡಿನೋಟಿಫಿಕೇಷನ್ ಮಾಡಬೇಕು. ಮಲೆನಾಡಿನ ಜನರು ಏನನ್ನೂ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲೂ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕಾಗಿದೆ ಎಂದರು.

ಮಲೆನಾಡಿಗರ ಬದುಕಿಗೆ ಕಸ್ತೂರಿರಂಗನ್ ವರದಿ ಮಾರಕ

ಕಸ್ತೂರಿರಂಗನ್ ವರದಿ ಜಾರಿಯಾದರೆ ಮಲೆನಾಡಿನ ಜನರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ. ಜನರ ಬದುಕಿಗೆ ತೊಂದರೆಯಾಗುವ ರೀತಿಯಲ್ಲಿ ಕಾನೂನುಗಳನ್ನು ಜಾರಿಗೊಳಿಸಬಾರದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ತೀರ್ಥಹಳ್ಳಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ಗಿಂತ ಸಂಸತ್ತು ಸಾರ್ವಭೌಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಕಾನೂನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರದ ಕೈಯಲ್ಲಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಈ ವಿಚಾರದಲ್ಲಿ ಜನರ ಪರವಾಗಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.

ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳದಿಂದ ಮಲೆನಾಡಿನ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. 1931ರಲ್ಲಿ ಮಹಾರಾಜರು ಮಂಜೂರು ಮಾಡಿದ ಭೂಮಿಗೆ ಸಂಬಂಧಿಸಿದ ಪ್ರಕರಣವೂ ನ್ಯಾಯಾಲಯದಲ್ಲಿದೆ. ಬ್ರಿಟಿಷ್ ಅಧಿಕಾರಿಗಳು ಮಂಜೂರು ಮಾಡಿದ್ದ ಜಮೀನುಗಳಿಗೂ ಈಗ ತೊಂದರೆ ಎದುರಾಗಿದೆ ಎಂದರು.

ಮಲೆನಾಡಿನ ಜನರು ಗುಟ್ಕಾ ಸೇರಿದಂತೆ ಹಲವು ಆರೋಗ್ಯ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಡವರು ಬದುಕುವಂತಾಗಬೇಕು. 30*40 ಅಡಿ ನಿವೇಶನ ಮಂಜೂರು ಮಾಡುವ ವಿಚಾರದಲ್ಲೂ ಜನರಿಗೆ ಸಮಸ್ಯೆಯಾಗಬಾರದು. ಕಂದಾಯ ಸಚಿವರಿಂದಲೂ ಇದಕ್ಕೆ ಪರಿಹಾರ ಕಲ್ಪಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಅವಕಾಶ ನೀಡುವುದಿಲ್ಲ: ರಾಮಲಿಂಗಾ ರೆಡ್ಡಿ

ಕಸ್ತೂರಿರಂಗನ್ ವರದಿಗೆ ಸರ್ಕಾರ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತಿದ್ದು, ಯಾವುದೇ ಕಾರಣಕ್ಕೂ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.

ತೀರ್ಥಹಳ್ಳಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಗಮನಕ್ಕೆ ಬಂದಿವೆ. ವಿಧಾನಮಂಡಲ ಅಧಿವೇಶನ ಮುಗಿದ ತಕ್ಷಣ ಮಲೆನಾಡಿಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಜನರೊಂದಿಗೆ ಸಭೆ ನಡೆಸಿ, ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಸಂಬಂಧಿಸಿದ ಅಧಿಸೂಚನೆ ಹೊರಡಿಸುವ ಬಗ್ಗೆಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಸ್ತೂರಿರಂಗನ್ ವರದಿಯನ್ನು ಸರ್ಕಾರ ಈಗಾಗಲೇ ತಿರಸ್ಕರಿಸಿದೆ. ಇದೀಗ ಏಳನೇ ಕರಡು ಅಧಿಸೂಚನೆ ಹೊರಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.

Related Posts

Leave a Reply

Your email address will not be published. Required fields are marked *