Tuesday, September 22, 2026
Menu

ವಂದೇ ಮಾತರಂ: ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

supreme court

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲ ಆರು ಚರಣ ಹಾಡುವುದನ್ನು ಕಡ್ಡಾಯಗೊಳಿಸಿದ ಕೇಂದ್ರದ ನಿರ್ದೇಶನ ಮತ್ತು ಸಂಬಂಧಿಸಿದ ದಂಡನಾತ್ಮಕ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ.ಮೋಹನಾ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆ ನಡೆಸಿದೆ. ಕರ್ನಾಟಕದ ಖ್ಯಾತ ಗಾಯಕ ಟಿ.ಎಂ.ಕೃಷ್ಣ ಅರ್ಜಿ ಸಲ್ಲಿಸಿದ್ದು, ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಹಾಡುವಂತೆ ಮಾಡಿರುವ ನಿಯಮ ಹಾಗೂ ಹಾಡದಿದ್ದರೆ ದಂಡಾತ್ಮಕ ಕ್ರಮ ಕೈಗೊಳ್ಳುವ ಅವಕಾಶವನ್ನು ಪ್ರಶ್ನಿಸಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಮುರಳೀಧರ್, ದಂಡಾತ್ಮಕ ಕಾನೂನಿನಲ್ಲಿ ಅಪರಾಧಕ್ಕೆ ಕಾರಣವಾಗುವ ನಡವಳಿಕೆಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಬೇಕು. ಅಸ್ಪಷ್ಟ ನಿಯಮಗಳ ಆಧಾರದ ಮೇಲೆ ನಾಗರಿಕರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಅವಕಾಶ ಇರಬಾರದು ಎಂದು ವಾದಿಸಿದರು.

ವಿಚಾರಣೆ ವೇಳೆ ‘ವಂದೇ ಮಾತರಂ’ನ ಎರಡು ಅಥವಾ ಆರು ಚರಣಗಲ್ಲಿ ಯಾವುದನ್ನು ಅಧಿಕೃತವಾಗಿ ಹಾಡಬೇಕು ಎಂಬುದನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಮುಂದಾಗಿಲ್ಲ. ರಾಷ್ಟ್ರೀಯ ಸಂಕೇತಗಳಿಗೆ ಸಂಬಂಧಿಸಿದ ನೀತಿ ಮತ್ತು ರೂಪವನ್ನು ನಿರ್ಧರಿಸುವುದು ಸರ್ಕಾರದ ವ್ಯಾಪ್ತಿಯಲ್ಲಿದೆ ಎಂದು ಪೀಠ ಹೇಳಿದೆ. ಹಾಡಲು ನಿರಾಕರಿಸುವ ನಾಗರಿಕರ ವಿರುದ್ಧ ಕ್ರಿಮಿನಲ್ ದಂಡನೆ ವಿಧಿಸಬಹುದೇ ಎಂಬ ಕಾನೂನು ಪ್ರಶ್ನೆಯನ್ನು ಪರಿಶೀಲಿಸುವುದಾಗಿ ಕೋರ್ಟ್‌ ತಿಳಿಸಿದೆ.

ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ವಿಚಾರಣೆ ವೇಳೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಹಿರಿಯ ವಕೀಲ ಎಸ್.ಮುರಳೀಧರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಾಗ್ವಾದ ನಡೆಯಿತು. ನೋಟಿಸ್ ನೀಡದಂತೆ ಕೋರ್ಟ್‌ಗೆ ಮನವಿ ಮಾಡಿದರು, ಆದರೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

Related Posts

Leave a Reply

Your email address will not be published. Required fields are marked *