ಉದಯಕಾಲ ನ್ಯೂಸ್, ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆ ಖಂಡಿತವಾಗಿ ನೀಡುವುದಷ್ಟೇ ಅಲ್ಲದೆ, ಪ್ರಸ್ತುತ ಮೋದಿ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪನೆಯಾಗಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರವಾಗಿ ನುಡಿದಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸತ್ತಿನ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ವಿಡಿಯೋ ತುಣುಕೊಂದನ್ನು ರಾಹುಲ್ ಗಾಂಧಿ ತಮ್ಮ ಅಧಿಕೃತ ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪ್ರತಿಭಟನೆ ಮತ್ತು ರಾಜಕೀಯ ತಲ್ಲಣ
ದೇಶಾದ್ಯಂತ ವಿವಾದಕ್ಕೀಡಾಗಿರುವ ಎಸ್‌ಐಆರ್ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ಆಂದೋಲನಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡುತ್ತಿಲ್ಲ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ. ಪ್ರತಿಭಟನಾ ಸ್ಥಳಕ್ಕೆ ತೆರಳುತ್ತಿದ್ದ CJP ಸಂಸ್ಥಾಪಕ ಅಭಿಜೀತ್ ದಿಪ್ಕೆ ಹಾಗೂ ಪ್ರಮುಖರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದ್ದು, ದೆಹಲಿಯಲ್ಲಿ ಬಿಗಿ ಭದ್ರತೆ ಹಾಗೂ ತೀವ್ರ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.
ಬಿಜೆಪಿ ತೀವ್ರ ವಾಗ್ದಾಳಿ
ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ತೀವ್ರವಾಗಿ ತಿರುಗೆಟು ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ರಾಹುಲ್ ಗಾಂಧಿ ಹಾಗೂ ಅರವಿಂದ್ ಕೇಜ್ರಿವಾಲ್ ಅವರು ವಿದೇಶಿ ಶಕ್ತಿಗಳ ಸೂಚನೆಯಂತೆ ದೇಶದಲ್ಲಿ ಅಶಾಂತಿ ಹಾಗೂ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಾಗತಿಕ ಮಟ್ಟದ ಬಿಕ್ಕಟ್ಟಿನ ನಡುವೆಯೂ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದನ್ನು ಇಂಡಿಯಾ ಮೈತ್ರಿಕೂಟದ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ದೇಶದ 140 ಕೋಟಿ ಜನರ ಸ್ಥಿರತೆಗೆ ಧಕ್ಕೆ ತರುವ ಇಂತಹ ಪ್ರಯತ್ನಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
#RahulGandhi #CJPProtest #GyaneshKumar #ElectionCommission #DelhiPolice #NitinNabin #IndiaAlliance #SIRProtest #JantarMantar #PoliticalNews


