ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಂಎಲ್ಸಿ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷವು ನಾಲ್ಕೂ ಕ್ಷೇತ್ರಗಳಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಎಲ್ಸಿ ಚುನಾವಣೆ ಸೇರಿದಂತೆ ಪ್ರಮುಖ ರಾಜಕೀಯ ಹಾಗೂ ಆಡಳಿತಾತ್ಮಕ ವಿಚಾರಗಳ ಕುರಿತು ವಿವರಣೆ ನೀಡಿದರು.
ಸಾಮಾನ್ಯವಾಗಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಸ್ವಲ್ಪ ಹಿನ್ನಡೆ ಅನುಭವಿಸುತ್ತಿತ್ತು. ಆದರೆ ಈ ಬಾರಿ ಸರ್ಕಾರವು ಪದವೀಧರರು ಹಾಗೂ ಶಿಕ್ಷಕರ ಹಲವು ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಿದೆ. ಸಭೆಗಳ ಸಂದರ್ಭದಲ್ಲೂ ಉತ್ತಮ ಸ್ಪಂದನೆ ಸಿಕ್ಕಿದ್ದು, ಸರ್ಕಾರವನ್ನು ಬೆಂಬಲಿಸುವುದಾಗಿ ತಿಳಿಸಿರುವುದರಿಂದ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಸಾರಥ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ
ಮುಖ್ಯಮಂತ್ರಿಗಳು ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಸಭೆಯ ಕುರಿತು ಮಾತನಾಡುತ್ತಾ, ರೈತರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು. ಇದರಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳಬೇಕಾದ ನಿರ್ಧಾರಗಳೂ ಇದ್ದು, ರಾಜ್ಯ ಸರ್ಕಾರದ ವತಿಯಿಂದ ಏನೆಲ್ಲ ನೆರವು ನೀಡಲು ಸಾಧ್ಯವೋ ಅದನ್ನು ಸಿಎಂ ನೆರವೇರಿಸಿದ್ದಾರೆ.
ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ
ಕೇಂದ್ರ ಸರ್ಕಾರದ ಬಳಿಗೆ ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯುವ ಕುರಿತು ಪ್ರತಿಕ್ರಿಯಿಸಿ, ಸಿಎಂ ಪ್ರವಾಸದಲ್ಲಿದ್ದ ಕಾರಣ ಚರ್ಚಿಸಲು ಸಾಧ್ಯವಾಗಿರಲಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಇನ್ಪುಟ್ ಸಬ್ಸಿಡಿ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಕುರಿತು ಮಾತನಾಡಿ, ಸಬ್ಸಿಡಿ ಬಿಡುಗಡೆಗೆ ಈಗಾಗಲೇ ಆದೇಶ ನೀಡಿ ಒಂದು ವಾರ ಕಳೆದಿದೆ. ಈ ಬಗ್ಗೆ ಇಂದು ಮತ್ತೊಮ್ಮೆ ಪರಿಶೀಲನೆ ನಡೆಸಿ, ಸಂಬಂಧಪಟ್ಟವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಕೆಎಎಸ್ ಪರೀಕ್ಷೆ ಕೆಇಎ ನಿರ್ಧಾರ ಅಂತಿಮ
ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಹಾಗೂ ಈ ಹಿಂದೆ ನಡೆದ 384 ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಕ್ರಿಯೆಯನ್ನು ಮೊದಲು ಪೂರ್ಣಗೊಳಿಸಿದ ಬಳಿಕ ಮುಂದಿನ ಪರೀಕ್ಷೆಗಳನ್ನು ನಡೆಸಬೇಕು ಎಂಬ ಅಭ್ಯರ್ಥಿಗಳ ಆಗ್ರಹದ ಕುರಿತು ಮಾತನಾಡಿದ ಡಾ. ಜಿ. ಪರಮೇಶ್ವರ್, ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಿರ್ಧರಿಸುತ್ತದೆ ಎಂದರು.
ಕೆಇಎ ಸ್ವತಂತ್ರ ಹಾಗೂ ಸ್ವಾಯತ್ತ ಸಂಸ್ಥೆಯಾಗಿದ್ದು, ಅದರ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಅದಕ್ಕಾಗಿಯೇ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಸಂದರ್ಭದಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಿರಲಿಲ್ಲ ಎಂಬುದನ್ನು ಅವರು ಈ ವೇಳೆ ಸ್ಮರಿಸಿದರು.
#GParameshwar #MLCElectionResults #KarnatakaGovt #KASExam #DroughtRelief #UdayakalaNews #SugarcaneIssue #KarnatakaPolitics #BangaloreNews


