Wednesday, October 28, 2026
Menu

ಮುಂದಿನ ಬಾರಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ ವಿಶ್ವಾಸ

ಉದಯಕಾಲ ನ್ಯೂಸ್, ಮೈಸೂರು: ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಬಳಸಿ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತಿದ್ದು, ಮುಂದಿನ ಬಾರಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಬರುವುದು ಸಂಪೂರ್ಣ ಖಚಿತ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ರೈತರ ಸಮಸ್ಯೆಗಳ ಕುರಿತು ತೀವ್ರ ತರಾಟೆಗೆ ತೆಗೆದುಕೊಂಡರು.

ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹಾಗೂ ಕಾಂಗ್ರೆಸ್ ವಿಫಲ

ಕಳೆದ ಅಕ್ಟೋಬರ್ 23 ರಂದು ನಡೆದ ವಿಧಾನ ಪರಿಷತ್ ಚುನಾವಣೆಯ 4 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 23 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದ ವಿಜಯೇಂದ್ರ, ಸೋಲಿಲ್ಲದ ಸರದಾರ ಎಂದು ಮೆರೆಯುತ್ತಿದ್ದವರನ್ನು ಮತದಾರರು ಸೋಲಿಸಿದ್ದಾರೆ. ಇದು ಸುಮಾರು 120 ರಿಂದ 130 ಕ್ಷೇತ್ರಗಳ ಮತದಾರರು ನೀಡಿರುವ ಮುನ್ಸೂಚನೆ ಹಾಗೂ ಸ್ಪಷ್ಟ ತೀರ್ಪಾಗಿದೆ ಎಂದರು.

ಗ್ಯಾರಂಟಿಗಳ ಭ್ರಮೆಯಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದ ಅಮಲಿನಲ್ಲಿ ನಾಡಿನ ರೈತರ ಜೊತೆ ಚೆಲ್ಲಾಟವಾಡುತ್ತಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಮೂಲಕ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ತಬ್ಧಗೊಂಡಿವೆ ಎಂದು ವಾಗ್ದಾಳಿ ನಡೆಸಿದರು.

ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಸರ್ಕಾರದ ನಿರ್ಲಕ್ಷ್ಯ

ರಾಜ್ಯದಲ್ಲಿ ತೀವ್ರ ಬರವಿದ್ದರೂ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ ನೀಡುವ ಬದಲು, ಬೊಕ್ಕಸದಲ್ಲಿ ಹಣವಿಲ್ಲ ಎಂದು ಹೇಳಲು ಮುಖ್ಯಮಂತ್ರಿಗಳು ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಹೋಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು. ಕಬ್ಬಿನ ಉಪ ಉತ್ಪನ್ನಗಳಿಂದ ರಾಜ್ಯ ಸರ್ಕಾರಕ್ಕೆ ಪ್ರತಿವರ್ಷ ಸುಮಾರು 15 ಸಾವಿರ ಕೋಟಿ ರೂಪಾಯಿ ಆದಾಯ ಬರುತ್ತಿದೆ. ಕೇವಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು, ಪ್ರತಿ ಟನ್ ಕಬ್ಬಿಗೆ 500 ರೂಪಾಯಿ ಪ್ರೋತ್ಸಾಹ ಧನ ನೀಡಿ ರೈತರ ಹಿತ ಕಾಯುವಂತೆ ಅವರು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಬಾರಿಯ ಯಶಸ್ವಿ ಆಡಳಿತವನ್ನು ಸಹಿಸಲಾಗದೆ, ರಾಹುಲ್ ಗಾಂಧಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಕಾಂಗ್ರೆಸ್‌ನ ಹುನ್ನಾರವನ್ನು ಜನತೆ ತಿರಸ್ಕರಿಸಲಿದ್ದಾರೆ ಎಂದರು. ವರುಣಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿ, “ಕಾದು ನೋಡಿ, ಕಾಲವೇ ಉತ್ತರ ನೀಡಲಿದೆ” ಎಂದು ತಿಳಿಸಿದರು.
#BJP #BYVijayendra #NDAGovernment #KarnatakaPolitics #Mysuru #Sandalwood #UdayakalaNews #CongressFailure

Related Posts

Leave a Reply

Your email address will not be published. Required fields are marked *