Wednesday, November 11, 2026
Menu

ಆರ್​ಎಸ್​ಎಸ್ ಬಗ್ಗೆ ನಕಲಿ ಸುದ್ದಿ ಹರಡಿದಕ್ಕೆ ಗೃಹ ಸಚಿವರ ವಿರುದ್ಧ ದೂರು

ಉದಯಕಾಲ ನ್ಯೂಸ್, ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ಸಂಘಟನೆಯನ್ನು ಕ್ರಿಮಿನಲ್ ಚಟುವಟಿಕೆಗಳಿಗೆ ತಳಕುಹಾಕಲು ಯತ್ನಿಸಿದ್ದಾರೆ ಹಾಗೂ ಸಮಾಜದಲ್ಲಿ ಅಶಾಂತಿ ಮೂಡಿಸುವ ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ. ತೇಜಸ್ ಗೌಡ ಎಂಬುವರು ದೂರು ದಾಖಲಿಸಿದ್ದು, ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಬಿಹಾರ ಮತ್ತು ಹರಿಯಾಣ ರಾಜ್ಯಗಳಲ್ಲಿ ನಡೆದ ಕಾರ್ಯಾಚರಣೆಗಳ ವೇಳೆ ಸುಮಾರು 44,250 ಜೀವಂತ ಕಾರ್ಟ್ರಿಜ್‌ಗಳು (ಮದ್ದುಗುಂಡುಗಳು) ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣಕ್ಕೆ ಆರ್​ಎಸ್​ಎಸ್​ ಸಂಘಟನೆಯನ್ನು ತಳಕುಹಾಕಿ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಲಾಗಿದ್ದು, ಕೃತಕ ಬುದ್ಧಿಮತ್ತೆ (AI) ಬಳಸಿ ತಿರುಚಿದ ಫೋಟೋ ಹಾಗೂ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಗಂಭೀರವಾಗಿ ಆರೋಪಿಸಲಾಗಿದೆ. ಗೃಹ ಸಚಿವರಂತಹ ಜವಾಬ್ದಾರಿಯುತ ಸಾಂವಿಧಾನಿಕ ಹುದ್ದೆಯಲ್ಲಿರುವವರೇ ಇಂತಹ ಸುಳ್ಳು ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುವುದು ಸರಿಯಲ್ಲ ಎಂದು ದೂರುದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಎನ್​ಎಸ್ ಸೆಕ್ಷನ್ ಅಡಿ ಎಫ್‌ಐಆರ್ ದಾಖಲಿಸಲು ಆಗ್ರಹ

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಕೃತ್ಯ ಎಸಗುವುದರಿಂದ ಕೋಮು ಸೌಹಾರ್ದತೆಗೆ ಧಕ್ಕೆ ಬರುವುದಲ್ಲದೆ, ಸಾರ್ವಜನಿಕವಾಗಿ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 192 (ಗಲಭೆಗೆ ಪ್ರಚೋದನೆ), 196 (ವಿವಿಧ ಗುಂಪುಗಳ ನಡುವೆ ದ್ವೇಷ ಹರಡುವುದು) ಮತ್ತು 353 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿ ಎಫ್‌ಐಆರ್ ದಾಖಲಿಸಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರೀಕ್ಷಿಸಲಾಗಿದೆ.
#HomeMinister#PriyankKharge #RSS #KarnatakaNews #BanashankariPoliceStation #FakeNewsControversy #BNSAct #PoliticalNews

Related Posts

Leave a Reply

Your email address will not be published. Required fields are marked *