ಉದಯಕಾಲ ನ್ಯೂಸ್, ಹಾವೇರಿ: ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ದರ ನಿಗದಿಗೊಳಿಸುವಂತೆ ಒತ್ತಾಯಿಸಿ ಜಿಲ್ಲೆಯ ಕಬ್ಬು ಬೆಳೆಗಾರರು ಬುಧವಾರ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆಸುತ್ತಿದ್ದ ರಸ್ತೆ ತಡೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಆದರೆ, ತಮಗೆ ನಿರೀಕ್ಷಿತ 3,600 ರೂಪಾಯಿ ಬೆಲೆ ದೊರೆಯುವವರೆಗೂ ತಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ರೈತ ಮುಖಂಡರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಇದೇ 23ರಂದು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆಯುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಈ ಬೆಳವಣಿಗೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸುಗಮವಾಗಿದ್ದು, ಜಿಲ್ಲಾಡಳಿತವೂ ನಿಟ್ಟುಸಿರು ಬಿಟ್ಟಿದೆ.
ಸಂಧಾನ ಸಭೆಗಳಿಗೆ ಗೈರು, ಬಂಕಾಪುರ ಟೋಲ್ ಬಳಿ ಹೆದ್ದಾರಿ ತಡೆ
ಕಳೆದ ಮೂರು ತಿಂಗಳಿನಿಂದ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರು ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ನಿರಂತರ ಹೋರಾಟ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ರೈತ ಮುಖಂಡರ ನಡುವೆ ಐದು ಬಾರಿ ಸಂಧಾನ ಸಭೆಗಳನ್ನು ಆಯೋಜಿಸಿತ್ತು. ಆದರೆ, ಈ ಐದೂ ಸಭೆಗಳಿಗೆ ಕಾರ್ಖಾನೆ ಮಾಲೀಕರು ಗೈರುಹಾಜರಾದ ಕಾರಣ ಸಭೆಗಳು ವಿಫಲವಾಗಿದ್ದವು. ಇದು ರೈತರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿತ್ತು.
ಕಾರ್ಖಾನೆ ಮಾಲೀಕರ ಧೋರಣೆಯಿಂದ ರೊಚ್ಚಿಗೆದ್ದ ಕಬ್ಬು ಬೆಳೆಗಾರರು ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಆಂದೋಲನ ತೀವ್ರಗೊಳಿಸಿದ್ದರು. ಹಾವೇರಿ ಜಿಲ್ಲೆಯ ವಿವಿಧ ರೈತ ಸಂಘಟನೆಗಳು ಒಗ್ಗೂಡಿ ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ಪಡೆಯುವ ಹೋರಾಟಕ್ಕಾಗಿ ಸಮನ್ವಯ ಸಮಿತಿಯನ್ನು ರಚಿಸಿಕೊಂಡು ಮುನ್ನಡೆದವು.
ಬುಧವಾರ ಜಿಲ್ಲಾ ಉಸ್ತುವಾರಿ ಹಾಗೂ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ನಿವಾಸದ ಮುಂದೆ ಆಹೋರಾತ್ರಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ರೈತರು ಸಿದ್ಧತೆ ನಡೆಸಿದ್ದರು. ಆದರೆ, ಸಚಿವರ ಮನೆ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗಬಹುದು ಎಂಬ ಕಾರಣ ನೀಡಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹಾವೇರಿ ನಗರದ ಹುಕ್ಕೇರಿಮಠದಿಂದ ಪ್ರತಿಭಟನೆ ಮೆರವಣಿಗೆ ಆರಂಭಿಸಿ, ಬಳಿಕ ಹೋರಾಟದ ಸ್ವರೂಪ ಬದಲಾಯಿಸಿದರು. ಶಿಗ್ಗಾಂವ್ ತಾಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಟೋಲ್‌ನಾಕಾದಲ್ಲಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ನ.23ರ ಸಭೆಯ ಭರವಸೆ, ಮುಂದಿನ ಹೋರಾಟದ ರೂಪುರೇಷೆ
ರಾಷ್ಟ್ರೀಯ ಹೆದ್ದಾರಿ ಬಂದ್‌ನಿಂದ ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಜಿಲ್ಲಾಡಳಿತವು ಇದೇ 23ರಂದು ರೈತರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆಯುವುದಾಗಿ ಭರವಸೆ ನೀಡಿತು. ಜತೆಗೆ, ನಡೆಯಲಿರುವ ಸಂಧಾನ ಸಭೆಯಲ್ಲಿ ಕಾರ್ಖಾನೆ ಮಾಲೀಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳುವ ವಿಶ್ವಾಸವನ್ನೂ ಅಧಿಕಾರಿಗಳು ನೀಡಿದರು. ಈ ಭರವಸೆಯ ಆಧಾರದ ಮೇಲೆ ರೈತರು ರಾಷ್ಟ್ರೀಯ ಹೆದ್ದಾರಿ 48ರ ತಡೆಯನ್ನು ಹಿಂಪಡೆದರು.
ಪ್ರತಿಭಟನೆ ಹಿಂಪಡೆದ ಬಳಿಕ ಮಾತನಾಡಿದ ರೈತ ಮುಖಂಡ ಚೂನಪ್ಪ ಪೂಜಾರಿ, ನವೆಂಬರ್ 23ರಂದು ನಡೆಯಲಿರುವ ಸಭೆಯಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಇಂದು ನಾವು ಸಚಿವ ರುದ್ರಪ್ಪ ಲಮಾಣಿ ಅವರ ಮನೆ ಮುಂದೆ ಪ್ರತಿಭಟನೆ ಮಾಡಬೇಕಾಗಿತ್ತು. ಆದರೆ ಅನಿವಾರ್ಯವಾಗಿ ರಾಷ್ಟ್ರೀಯ ಹೆದ್ದಾರಿ 48ನ್ನು ಐದು ತಾಸು ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಯಿತು. ನಾವೇನೂ 4,000 ರೂಪಾಯಿ ಬೇಡಿಕೆ ಇಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದುವರಿದು ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ರೈತರಿಗೆ ಎಸ್‌ಎಪಿ (SAP) ಹಾಗೂ ಸಾಲಮನ್ನಾ ಸೇರಿದಂತೆ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ. ಈ ಸಂಬಂಧ ರಾಜ್ಯದ ಎಲ್ಲ ರೈತ ಸಂಘಟನೆಗಳ ಸಭೆ ನಡೆದಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಸದ್ಯ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ನೀಡಬೇಕು ಎಂದು ಒತ್ತಾಯಿಸಿದರು. ಒಟ್ಟಾರೆ, ನವೆಂಬರ್ 23ರ ಸಭೆಯ ಫಲಿತಾಂಶದ ಮೇಲೆ ಹಾವೇರಿ ಕಬ್ಬು ಬೆಳೆಗಾರರ ಮುಂದಿನ ನಿರ್ಧಾರ ಅವಲಂಬಿತವಾಗಿದೆ.
#Haveri #SugarcaneFarmers #NH48 #NationalHighwayBlockade #ChoonappaPoojari #RudrappaLamani #SugarcanePrice #FarmersProtest #Udayakala #KarnatakaNews

