Thursday, November 19, 2026
Menu

ಬಸವಣ್ಣನವರ ಅವಹೇಳನಕಾರಿ ಪುಸ್ತಕ: ಸಿಎಂ ಜೊತೆ ಚರ್ಚಿಸಿ ಕಠಿಣ ಕ್ರಮ – ಶಿವರಾಜ್ ತಂಗಡಗಿ

ಉದಯಕಾಲ ನ್ಯೂಸ್, ಬೆಂಗಳೂರು: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದು, ವಿಡಿಯೋಗಳ ಮೂಲಕ ಇಲ್ಲಸಲ್ಲದ ಆರೋಪಗಳನ್ನು ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ಚಾರಿತ್ರ್ಯ ಹಾಗೂ ಐತಿಹಾಸಿಕ ವ್ಯಕ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಬರಹ ಮತ್ತು ವಿಡಿಯೋಗಳನ್ನು ರೂಪಿಸಿರುವುದು ತೀವ್ರ ಖಂಡನೀಯವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಈಗಾಗಲೇ ಈ ವಿವಾದ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ ಸರ್ಕಾರದ ಮಟ್ಟದಲ್ಲಿ ಕಠಿಣ ಕ್ರಮದ ಸುಳಿವನ್ನು ಸಚಿವರು ನೀಡಿದ್ದಾರೆ.

ಇತಿಹಾಸ ತಿರುಚುವ ಪ್ರಯತ್ನ ಸಹಿಸಲು ಸಾಧ್ಯವಿಲ್ಲ: ತಂಗಡಗಿ ಕಿಡಿ

ಮಾಧ್ಯಮಗಳ ಮುಂದೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಶಿವರಾಜ್ ತಂಗಡಗಿ, ಬಸವಣ್ಣನವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿರುವುದು ನಿಜಕ್ಕೂ ಖಂಡನೀಯ. ಬಸವಣ್ಣನವರು ನಮ್ಮ ನಾಡಿನ ಸಾಂಸ್ಕೃತಿಕ ನಾಯಕ. ಸಾಮಾಜಿಕ ಸಮಾನತೆ, ಕಾಯಕ ಹಾಗೂ ದಾಸೋಹ ತತ್ವಗಳ ಮೂಲಕ ನಾಡಿನ ಅರಿವಿನ ಬೆಳಕು ಮೂಡಿಸಿದ ಮಹಾನ್ ವ್ಯಕ್ತಿತ್ವ ಅವರದ್ದು. ಆದರೆ, ಸರಿಯಾಗಿ ಇತಿಹಾಸ ಗೊತ್ತಿಲ್ಲದವರು ತಮ್ಮ ಸ್ವಾರ್ಥಕ್ಕಾಗಿ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಗುಡುಗಿದರು.

ಇತಿಹಾಸವನ್ನು ತಿರುಚುವ ಇಂತಹ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ. ಯಾವುದೇ ಐತಿಹಾಸಿಕ ಪುರುಷರು ಅಥವಾ ಸಾಂಸ್ಕೃತಿಕ ನಾಯಕರ ಬಗ್ಗೆ ಆಧಾರರಹಿತವಾಗಿ, ಅಪಮಾನಕಾರಿಯಾಗಿ ಮಾತನಾಡುವುದು ಹಾಗೂ ಬರೆಯುವುದು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದಲೂ ಅಪಾಯಕಾರಿ. ಇಂತಹ ವಿಕೃತ ಮನಸ್ಥಿತಿಯ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ದಿಟ್ಟ ಕ್ರಮ ಅನಿವಾರ್ಯವಾಗಿದೆ ಎಂದು ಸಚಿವರು ಪ್ರತಿಪಾದಿಸಿದರು.

ಪುಸ್ತಕ ಮುಟ್ಟುಗೋಲು ಅಥವಾ ನಿಷೇಧ? ಸಂಪುಟ ಸಭೆಯಲ್ಲಿ ನಿರ್ಧಾರ

ಮುಂದಿನ ಕ್ರಮಗಳ ಕುರಿತು ವಿವರಿಸಿದ ಶಿವರಾಜ್ ತಂಗಡಗಿ, ಅವಹೇಳನಕಾರಿ ಪುಸ್ತಕ ಬರೆದವರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿ ಡಿಕೆಶಿ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗುವುದು. ಆ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೋ ಅಥವಾ ಸಂಪೂರ್ಣವಾಗಿ ನಿಷೇಧ ಮಾಡಬೇಕೋ ಎಂಬ ಬಗ್ಗೆ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ಹಾಗೂ ಅವಹೇಳನಕಾರಿ ವಿಷಯಗಳ ಕುರಿತೂ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದ್ದು, ಕಾನೂನು ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಲಹೆ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ವಿವಿಧ ಮಠಾಧೀಶರು, ಸಾಹಿತಿಗಳು, ಚಿಂತಕರು ಹಾಗೂ ಸಮುದಾಯದ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಇಂದಿನ ಸಚಿವ ಸಂಪುಟ ಸಭೆಯ ತೀರ್ಮಾನದತ್ತ ಎಲ್ಲರ ಚಿತ್ತ ನೆಟ್ಟಿದೆ.

#ShivarajTangadagi #Basavanna #ControversialBook #CabinetMeeting #Siddaramaiah #CulturalLeader #KarnatakaNews #BengaluruNews #Udayakala #KannadaNews

Related Posts

Leave a Reply

Your email address will not be published. Required fields are marked *