Wednesday, November 25, 2026
Menu

ಬಾಂಗ್ಲಾದವರ ನಕಲಿ ದಾಖಲೆಗೆ ಸಹಕರಿಸಿದ ಸರ್ಕಾರಿ ವೈದ್ಯನ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ಉದಯಕಾಲ ನ್ಯೂಸ್, ಬೆಂಗಳೂರು: ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಹದಿನಾಲ್ಕು ಮಂದಿ ಬಾಂಗ್ಲಾದೇಶದ ಪ್ರಜೆಗಳು ನಕಲಿ ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಪಡೆದುಕೊಳ್ಳಲು ನೆರವಾಗುವ ಉದ್ದೇಶದಿಂದ, ಯಾವುದೇ ಪೂರಕ ದಾಖಲೆಗಳನ್ನು ಪರಿಶೀಲಿಸದೆ ಅವರ ವಿಳಾಸ ದೃಢೀಕರಣ ಪತ್ರಗಳಿಗೆ ಸಹಿ ಹಾಕಿದ್ದ ಸರ್ಕಾರಿ ವೈದ್ಯರೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ 9ನೇ ಆರೋಪಿಯಾಗಿರುವ ಡಾ. ಲೋಕೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತೀವ್ರ ಅಸಮಾಧಾನದೊಂದಿಗೆ ವಜಾಗೊಳಿಸಿದೆ.

ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಪೀಠದಿಂದ ಖಡಕ್ ಆದೇಶ

9ನೇ ಆರೋಪಿ ಡಾ. ಲೋಕೇಶ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠವು, ಪ್ರಕರಣದ ವಿಚಾರಣೆಯನ್ನು ಎದುರಿಸುವಂತೆ ಸ್ಪಷ್ಟಪಡಿಸಿ ಅರ್ಜಿಯನ್ನು ತಿರಸ್ಕರಿಸಿದೆ.

ಯಾವುದೇ ದಾಖಲೆ ಪರಿಶೀಲಿಸದೆ 14 ವಿದೇಶಿಯರಿಗೆ ಸಹಿ: ಹೈಕೋರ್ಟ್ ಅಸಮಾಧಾನ

ಆದೇಶದ ವೇಳೆ ನ್ಯಾಯಪೀಠವು ಮಹತ್ವದ ಅಭಿಪ್ರಾಯಗಳನ್ನು ದಾಖಲಿಸಿದೆ. ಅರ್ಜಿದಾರರು ಸರ್ಕಾರಿ ವೈದ್ಯರಾಗಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವುದು ಅವರ ಪ್ರಾಥಮಿಕ ಕರ್ತವ್ಯವಾಗಿದೆ. ಗೆಜೆಟೆಡ್ ಅಧಿಕಾರಿಯಾಗಿ ದಾಖಲೆಗಳನ್ನು ದೃಢೀಕರಿಸುವ ಅಧಿಕಾರ ಅವರಿಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ವಿಳಾಸಕ್ಕೆ ಸಂಬಂಧಿಸಿದಂತೆ ಯಾವುದೇ ಬಾಡಿಗೆ ಕರಾರು ಪತ್ರ ಅಥವಾ ಇತರೆ ಪೂರಕ ದಾಖಲೆಗಳನ್ನು ಪರಿಶೀಲಿಸದೆ 14 ವಿದೇಶಿ ಪ್ರಜೆಗಳ ದಾಖಲೆಗಳಿಗೆ ಸಹಿ ಹಾಕಿದ್ದಾರೆ. ಒಬ್ಬರು ಅಥವಾ ಇಬ್ಬರಿಗೆ ಇಂತಹ ಪ್ರಮಾದ ನಡೆದಿದ್ದರೆ ಒಪ್ಪಬಹುದಿತ್ತು. ಆದರೆ ಇಲ್ಲಿ ಯಾವುದೇ ಸಾಕ್ಷ್ಯಾಧಾರವಿಲ್ಲದೆ ಸರಣಿಯಂತೆ ದೃಢೀಕರಣ ಮಾಡಲಾಗಿದೆ ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೆ, ವಿಚಾರಣಾ ನ್ಯಾಯಾಲಯವು (ಮ್ಯಾಜಿಸ್ಟ್ರೇಟ್) ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಗ್ನಿಜೆನ್ಸ್ (Cognizance) ತೆಗೆದುಕೊಂಡಿದೆ. ಈ ಹಂತದಲ್ಲಿ ಸುದೀರ್ಘ ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ಸರ್ಕಾರಿ ವೈದ್ಯನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿತು.

24ನೇ ಆರೋಪಿಗೆ ರಿಲೀಫ್ ನೀಡಿದ ಹೈಕೋರ್ಟ್

ಇದೇ ಪ್ರಕರಣದಲ್ಲಿ 24ನೇ ಆರೋಪಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಮಾತ್ರ ಹೈಕೋರ್ಟ್ ರದ್ದುಗೊಳಿಸಿ ರಿಲೀಫ್ ನೀಡಿದೆ. ಬಾಂಗ್ಲಾದೇಶದ ಇಬ್ಬರು ಪ್ರಜೆಗಳಿಗೆ ಶೆಡ್ ನಿರ್ಮಿಸಿ ಬಾಡಿಗೆಗೆ ನೀಡಿದ್ದಲ್ಲದೆ, ಬಾಡಿಗೆ ಕರಾರು ಪತ್ರ ಮಾಡಿಕೊಡುವ ಮೂಲಕ ಅವರು ಆಧಾರ್ ಕಾರ್ಡ್ ಪಡೆಯಲು ನೆರವಾಗಿದ್ದಾರೆ ಎಂಬ ಆರೋಪವನ್ನು 24ನೇ ಆರೋಪಿ ಎದುರಿಸುತ್ತಿದ್ದರು.

ಆದರೆ, ಈ ಆರೋಪವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳು ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿಲ್ಲ ಎಂಬ ಅಂಶವನ್ನು ಗಮನಿಸಿದ ನ್ಯಾಯಪೀಠವು, ಆಧಾರರಹಿತ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ ಎಂಬ ಕಾರಣಕ್ಕೆ 24ನೇ ಆರೋಪಿಯ ವಿರುದ್ಧದ ಪ್ರಕರಣವನ್ನು ಮಾತ್ರ ರದ್ದುಗೊಳಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

ಅಕ್ರಮವಾಗಿ ದೇಶದೊಳಗೆ ನುಸುಳಿದ್ದ ಬಾಂಗ್ಲಾದೇಶದ ಪ್ರಜೆಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಕ್ರಮವಾಗಿ ಭಾರತೀಯ ಗುರುತಿನ ಚೀಟಿಗಳಾದ ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್‌ಗಳನ್ನು ಪಡೆದುಕೊಳ್ಳಲು ಸಹಾಯ ಮಾಡಿದ ಗಂಭೀರ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳು ಹಾಗೂ ವಿದೇಶಿಯರ ಕಾಯ್ದೆಯ ಸೆಕ್ಷನ್ 14ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು. ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ 9ನೇ ಆರೋಪಿ ಡಾ. ಲೋಕೇಶ್ ಹಾಗೂ 24ನೇ ಆರೋಪಿ ಪ್ರತ್ಯೇಕವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ವೈದ್ಯನ ಅರ್ಜಿಯನ್ನು ವಜಾಗೊಳಿಸಿದ್ದು, 24ನೇ ಆರೋಪಿಗೆ ಮಾತ್ರ ನೆಮ್ಮದಿ ನೀಡಿದೆ.

#KarnatakaHighCourt #AadhaarScam #BangladeshiImmigrants #CriminalCase #JusticeHPSandesh #BengaluruNews #LegalNews #ForeignersAct #Udayakala #KannadaNews

Related Posts

Leave a Reply

Your email address will not be published. Required fields are marked *