ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.
ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ, ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದರು.
ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ 1,400 ಕೋಟಿ ರೂ. ಮಂಜೂರು ಮಾಡಿದ್ದಾರೆ. ಆದರೆ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.
ನದಿ ಜಲ ಸಂಪನ್ಮೂಲ ಸದ್ವಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.
ಸಮತೋಲಿತ ಜೀವನೋಪಾಯ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳನ್ನು (MSME) ಬೆಂಬಲಿಸಲು ಹೆಚ್ಚು ಸೂಕ್ತವಾದ ಉಪಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ದೇವೇಗೌಡರು ಒತ್ತಿ ಹೇಳಿದರು.
ಹಣಕಾಸು ಬೆಂಬಲ ಪಡೆಯುವಲ್ಲಿ ಅತಿಸಣ್ಣ, ಸಣ್ಣ ಕೈಗಾರಿಕೆಗಳು ಮಧ್ಯಮ ಗಾತ್ರದ ಕೈಗಾರಿಕೆಗಳೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಉದ್ದೇಶಕ್ಕಾಗಿ ಪ್ರತ್ಯೇಕ ನೀತಿ, ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯ ತುಂಬಾ ಇದೆ ಎಂದು ಅವರು ಸಲಹೆ ನೀಡಿದರು.
ಅತಿ ಸಣ್ಣ, ಸಣ್ಣ ಕೈಗಾರಿಕೆಗಳಿಗೆ ಸಾಲದ ಅನುಮೋದನೆ ನೀಡುವಾಗ ಸಿಬಿಲ್ (CIBIL) ಸ್ಕೋರ್ ಮಾನದಂಡವನ್ನು ಪರಿಗಣಿಸಬಾರದು. ಬಡ್ಡಿದರಗಳನ್ನು ಶೇ.7ರಿಂದ 8ಕ್ಕೆ ಇಳಿಸಬೇಕು ಮತ್ತು ಆರಂಭಿಕ ಸಾಲ ಮರುಪಾವತಿಗಾಗಿ ಸ್ವತ್ತುಗಳ ಮರುಸ್ವಾಧೀನ ದಂಡ ಪ್ರಯೋಗವನ್ನು ಕೈಬಿಡಬೇಕು ಎಂದು ದೇವೇಗೌಡರು ಸರಕಾರವನ್ನು ಒತ್ತಾಯಿಸಿದರು.