ಪಟಿಯಾಲ ಬಳಿ ಶುಕ್ರವಾರ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಪಟಿಯಾಲದ ಬಳಿ ಅಪಘಾತಕ್ಕೀಡಾಗಿತ್ತು. ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಷಯ ತಿಳಿದ ಸಿಎಂ ಸಿದ್ದರಾಮಯ್ಯ ಅವರು ಶಾಂತಕುಮಾರ್‌ರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಕರ್ನಾಟಕದ ರೈತ ಮುಖಂಡನಾಗಿ ಹಲವು ರೈತ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ಶಾಂತಕುಮಾರ್ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿ ಸಂಬಂಧ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳುವಾಗ ಈ ದುರಂತ ನಡೆದಿತ್ತು. ಶಾಂತಕಮಾರ್ ಅವರ ಎಡಗೈ, ಎಡ ಕಾಲು ಜೊತೆಗೆ ಸ್ಪೈನಲ್ ಕಾರ್ಡ್‌ಗೆ ಗಂಭೀರ ಗಾಯಗಳಾಗಿವೆ.
ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.