ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ಅಧಿವೇಶನದಲ್ಲಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಅಧಿವೇಶನಕ್ಕೆ ಸಂಬಂಧಿಸಿದಂತೆ ಬಿಜೆಪಿ- ಜೆಡಿಎಸ್ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮುಗಲಭೆ ಹೆಚ್ಚಾಗಿದೆ. ಮೈಸೂರಿನಲ್ಲಿ ಇತ್ತೀಚೆಗೆ ಮುಸ್ಲಿಮರು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಗಳ ಸಾಲದ ಹೊರೆಯಿಂದಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಲಂಚ ನೀಡಿ ಪಾಸಾಗಬೇಕಾದ ಸ್ಥಿತಿ ಬಂದಿದೆ ಎಂದು ದೂರಿದರು.
ಕೆಪಿಎಸ್‌ಸಿಯಲ್ಲಿ ಕನ್ನಡದ ಕೊಲೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು ಎಂಬುದನ್ನು ಮರೆತಿದ್ದಾರೆ. ಬಿಜೆಪಿ ಸರ್ಕಾರ ರೈತ ಸ್ನೇಹಿಯಾಗಿದ್ದರೆ, ಕಾಂಗ್ರೆಸ್ ನಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಎಲ್ಲೆಲ್ಲೂ ಕಸದ ರಾಶಿ ಕಂಡುಬರುತ್ತಿದೆ. ಇವೆಲ್ಲ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.