ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಸಚಿವರುಗಳ ಹೆಸರು ಕೇಳಿ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರ್ಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ, ಮಾಡಲಿ” ಎಂದರು.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದ್ದರೂ ಜಾಮೀನು ಅರ್ಜಿಯ ವಿಚಾರಣೆ ಇಂದು ನ್ಯಾಯಾಲಯದ ಮುಂದೆ ಬರಲಿದೆ.