ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಸುಳ್ಳೆ ಟೀಕಿಸಿದರು. ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದರು ಎಂದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸಿದರು. ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಚುನಾವಣೆಯನ್ನು ಎದುರಿಸಿದರು. 1980ರಲ್ಲಿ ಬಿಜೆಪಿ ಪ್ರಾರಂಭವಾದಾಗ ಕೇವಲ 2 ಸ್ಥಾನಗಳನ್ನು ಪಡೆದಿತ್ತು. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನವನ್ನು ಪಡೆದಿದ್ದಾರೆ ಎಂದು ವಿವರಿಸಿದರು.
ಬಿಜೆಪಿಯವರು 2008 ರಿಂದ 2013 , 2019 ರಿಂದ 2023 ರವರೆಗೆ ಅಧಿಕಾರ ನಡೆಸಿದ್ದೀರಿ. ಬಿಜೆಪಿಯವರು ಒಮ್ಮೆಯೂ ಬಹುಮತ ನೀಡದೇ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ, ಅದರಲ್ಲಿ ಶೇ10 ರಷ್ಟು ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.