ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ನ್ಯಾಯಮೂರ್ತಿಗಳ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹೋದಾಗ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಕೊಲಿಜಿಯಂ ಸಭೆ ಕರೆದು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ತಕ್ಷಣವೇ ದೆಹಲಿ ಹೈಕೋರ್ಟ್‌ನಿಂದ ಮಾತೃ ಸಂಸ್ಥೆ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸುವ ನಿರ್ಧಾರ ಕೈಗೊಂಡಿದ್ದಾರೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಮನೆಯಲ್ಲಿ ಇಲ್ಲದ ವೇಳೆ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುಟುಂಬಸ್ಥರು ಪೊಲೀಸ್ ಮತ್ತು ಅಗ್ನಿಶಾಮಕ ದಳ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಆದರೆ, ತಪಾಸಣೆಯ ವೇಳೆ ಅಲ್ಲಿ ದೊಡ್ಡ ಮೊತ್ತದ ನಗದು ಹಣ ಇರುವುದು ಬೆಳಕಿಗೆ ಬಂದಿದೆ. ಈ ಹಣದ ಮೂಲದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಈ ಘಟನೆಯು ನ್ಯಾಯಮೂರ್ತಿಗಳ ವೃತ್ತಿಪರ ನಡವಳಿಕೆ ಮತ್ತು ಸಮಗ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ನ್ಯಾಯಮೂರ್ತಿ ವರ್ಮಾ ವಿರುದ್ಧ ತನಿಖೆ ಆರಂಭಿಸುವ ಮತ್ತು ದೋಷಾರೋಪಣೆ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.