ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ.
ಭೋವಿ ಸಮುದಾಯದ ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.
ಕೆಬಿಡಿಸಿಯಿಂದ ಹಣವನ್ನು ವರ್ಗಾವಣೆ ಮಾಡಲಾಗಿದೆ. ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಮಾಜಿ ಎಂಡಿ ನಾಗರಾಜಪ್ಪನನ್ನು ವಶಕ್ಕೆ ಪಡೆಯಾಲಾಗಿದ್ದು, ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ.
ನಕಲಿ ಖಾತೆಗಳನ್ನು ಬಳಸಿಕೊಂಡು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ. ಸದ್ಯ ನಾಗರಾಜಪ್ಪ ನನ್ನು ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ ಹೆಚ್ಚಿನ ತನಿಖೆಗಾಗಿ ನಾಗರಾಜಪ್ಪನನ್ನು 14 ದಿನ ವಶಕ್ಕೆ ಪಡೆದಿದೆ. ಇ.ಡಿ. ಅಧಿಕಾರಿಗಳು ಶುಕ್ರವಾರ ನಾಗರಾಜಪ್ಪ, ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲೀಲಾವತಿ ಮತ್ತು ಅಧೀಕ್ಷಕರಾಗಿದ್ದ ಪಿ.ಡಿ.ಸುಬ್ಬಪ್ಪ ಅವರಿಗೆ ಸೇರಿದ 10 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಬ್ಯಾಂಕ್ ಖಾತೆಗಳ ವಿವರ, ಸ್ಥಿರಾಸ್ತಿ-ಚರಾಸ್ತಿಗಳು, ಸಂಬಂಧಿಕರ ಹೆಸರಿನಲ್ಲಿ ಸಂಪಾದನೆ ಮಾಡಿದ್ದ ಆಸ್ತಿ ಮತ್ತಿ ತರ ದಾಖಲೆಗಳು ಲಭ್ಯವಾಗಿದ್ದವು. ಈ ಬಗ್ಗೆ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣ ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡು ಅವ್ಯವಹಾರ ನಡೆಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.