ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿತ್ತು.
ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸಹ ಇದನ್ನು ಖಂಡಿಸಿ ಈ ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆದು ಕ್ರಮಕೈಗೊಳ್ಳುವ ಭರವಸೆ ನೀಡಿದ್ದು, ಶಿವಮೊಗ್ಗದಲ್ಲಿ ಜನಿವಾರ ತೆಗೆಸಿದ ಅಧಿಕಾರಿಯ ಅಮಾನತಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸೂಚಿಸಿದ್ದಾರೆ.
ಸಿಇಟಿ ಪರೀಕ್ಷೆ ಬರೆಯುತ್ತಿದ್ದ ಬ್ರಾಹ್ಮಣ ಜನಾಂಗದ ವಿದ್ಯಾರ್ಥಿಯ ಜನಿವಾರ ಕತ್ತರಿಸಿರುವ ಘಟನೆಯನ್ನು ಖಂಡಿಸಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪರೀಕ್ಷಾಧಿಕಾರಿಗಳನ್ನು ಅಮಾನತು ಮಾಡಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಪರೀಕ್ಷಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್ ರಘುನಾಥ್ ಒತ್ತಾಯಿಸಿದ್ದಾರೆ.
ಅಧಿಕಾರಿ ಸಸ್ಪೆಂಡ್
ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ತೆಗೆಯುವ ಅಧಿಕಾರ ಯಾವ ಅಧಿಕಾರಿಗು ಇಲ್ಲ ಈ ರೀತಿ ಮಾಡಿರುವುದು ಸರಿಯಲ್ಲ ಎಂದವರು ಹೇಳಿದರು ಈ ವಿಚಾರ ತಮ್ಮ ವ್ಯಾಪ್ತಿಗೆ ಬರದಿದ್ದರೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿರುವುದರಿಂದ ಅಧಿಕಾರಿಯ ಅಮಾನತ್ತಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು,