ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯ ಕುಪ್ವಾರಾ-ಪೂಂಚ್ ವಲಯದಲ್ಲಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಸತತ ನಾಲ್ಕನೇ ದಿನವೂ ಕದನ ವಿರಾಮ ಉಲ್ಲಂಘಿಸಿದೆ.
ಕಳೆದರಡು ದಿನಗಳಿಂದ- ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಸಣ್ಣ ಶಸ್ತ್ರಾಸ್ತ್ರಗಳಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದಾರೆ.
ಪೂಂಚ್ ವಲಯದಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು ಇದೇ ಮೊದಲು. ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನಿ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ಏ.22 ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವುದರ ನಡುವೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಉದ್ವಿಗ್ನತೆ ಹೆಚ್ಚಾಗಿದೆ.
ಇಬ್ಬರು ಸೆರೆ ಶಸ್ತ್ರಾಸ್ತ್ರ ವಶ:
ಕುಲ್ಗಾಮ್ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಧಿಕೃತ ಪ್ರಕಟಣೆಯ ಪ್ರಕಾರ, ಖೈಮೋಹ್‌ನ ಮಟಲ್‌ಹಾಮಾ ಚೌಕ್ ಥೋಕರ್‌ಪೋರಾದಲ್ಲಿ ಸ್ಥಾಪಿಸಲಾದ ಚೆಕ್‌ಪಾಯಿಂಟ್‌ನಲ್ಲಿ ಇಬ್ಬರು ವ್ಯಕ್ತಿಗಳನ್ನು ತಡೆದು ನಂತರ ಬಂಧಿಸಲಾಯಿತು. ಬಂಧಿತರಿಂದ ಎರಡು ಪಿಸ್ತೂಲ್, ಎರಡು ಪಿಸ್ತೂಲ್ ಮ್ಯಾಗಜೀನ್‌ಗಳು ಮತ್ತು 25 ಸುತ್ತು ಪಿಸ್ತೂಲ್ ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಈ ಸಂಬಂಧ ಖೈಮೋಹ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.