ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಗಿದೆ. ಪೂಂಜಾ ಸಲ್ಲಿಸಿರುವ ಅರ್ಜಿ ನ್ಯಾ. ವಿ. ಶ್ರೀಶಾನಂದ ಅವರಿದ್ದ ರಜಾ ಕಾಲದ ಏಕಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದ್ದು, ರಾಜ್ಯ ಸರ್ಕಾರಕ್ಕೆ ಹಾಗೂ ದೂರುದಾರ ಎಸ್ ಬಿ ಇಬ್ರಾಹಿಂಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮೇ 20 ಕ್ಕೆ ಮುಂದೂಡಲಾಗಿದೆ.
ಈ ಅರ್ಜಿ ಕುರಿತು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಮುಂದೆ ವಿಚಾರ ಮಂಡಿಸಿದರು. ಆಗ ನ್ಯಾಯಮೂರ್ತಿಗಳು, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣ. ಈ ಸಂಬಂಧ ಸಿಜೆ ನಿರ್ದೇಶನ ಮೇಲೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸರಕಾರ ಇದೇ ರೀತಿಯ ಧೋರಣೆ ಮುಂದುವರಿಸಿದರೆ ಬಿಜೆಪಿಯು ಹೋರಾಟ ತೀವ್ರಗೊಳಿಸಲಿದೆ ಎಂದು ಎಚ್ಚರಿಸಿದ್ದಾರೆ.