ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
“ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ ಇದು ಬೆಂಗಳೂರು ಜಿಲ್ಲೆಯಾಗಿತ್ತು. ಆಡಳಿತಾತ್ಮಕ ದೃಷ್ಟಿಯಿಂದ ಈ ಹೆಸರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಈ ಮರುನಾಮಕರಣ ಮಾಡುತ್ತಿರುವ ವಿಚಾರವನ್ನು ತಿಳಿಸಲು ಸಂತೋಷವಾಗುತ್ತಿದೆ” ಎಂದು ತಿಳಿಸಿದರು.
ಕಾನೂನು ಚೌಕಟ್ಟಿನಲ್ಲಿ ಜಿಲ್ಲೆ ಮರುನಾಮಕರಣ
ರಾಮನಗರ ಜಿಲ್ಲೆ ಮರುನಾಮಕರಣದ ಹೆಚ್ಚಿನ ಅನುಕೂಲಗಳೇನು, ಇದಕ್ಕೆ ತಗುಲುವ ವೆಚ್ಚ ಎಷ್ಟು ಎಂದು ಕೇಳಿದಾಗ, “ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ಇದಕ್ಕಾಗಿ ಯಾವುದೇ ಆರ್ಥಿಕ ಸಮಸ್ಯೆ ಇರುವುದಿಲ್ಲ. ನಮ್ಮದು ಮೊದಲು ಬೆಂಗಳೂರು ಜಿಲ್ಲೆಯಾಗಿತ್ತು. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷನಾಗಿದ್ದೆ. ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ರಾಮನಗರ, ಕನಕಪುರ, ಮಾಗಡಿ ಇವೆಲ್ಲವೂ ಬೆಂಗಳೂರಿನ ಭಾಗವಾಗಿತ್ತು. ಆ ಹೆಸರನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಈ ಜಿಲ್ಲೆಯನ್ನು ಕಾನೂನು ಚೌಕಟ್ಟಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ” ಎಂದು ತಿಳಿಸಿದರು.
ಇದಕ್ಕೆ ಕೇಂದ್ರ ಸರ್ಕಾರ ವಿರೋಧಿಸಿತ್ತು ಎಂದು ಕೇಳಿದಾಗ, “ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಯಾವುದೇ ಅಧಿಕಾರ ಇರುವುದಿಲ್ಲ. ಅವರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದೆವು. ಆದರೆ ಕೆಲವರು ರಾಜಕೀಯ ಮಾಡುವ ಪ್ರಯತ್ನ ಮಾಡಿದರು. ಇದು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇದು ನಮ್ಮ ಹಕ್ಕು. ಗದಗ, ಚಾಮರಾಜನಗರ ಜಿಲ್ಲೆ ಸೇರಿದಂತೆ ಬೇರೆ ಜಿಲ್ಲೆಗಳನ್ನು ಮಾಡಿದ್ದೇವೆ. ರಾಮನಗರ ಜಿಲ್ಲೆ ಎಂದು ಮಾಡಿದಾಗ ಕೇಂದ್ರವನ್ನು ಕೇಳಿರಲಿಲ್ಲ. ಇನ್ನುಮುಂದೆ ಎಲ್ಲಾ ದಾಖಲೆಗಳಲ್ಲೂ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆಯಾಗಲಿದೆ. ನನ್ನನ್ನು ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯವನು ಎಂದು ಕರೆಯಬೇಕು” ಎಂದು ತಿಳಿಸಿದರು.
ಬಿಡಿಎ ನಿವೇಶನದಾರರ ತೆರಿಗೆ ಬಡ್ಡಿ ವಿನಾಯಿತಿಗೆ ಒಟಿಎಸ್
“ಬೆಂಗಳೂರಿನಲ್ಲಿ ಅನೇಕ ಸಂಘ ಸಂಸ್ಥೆಗಳು, ದೇವಾಲಯಗಳು ಬಿಡಿಎ ವ್ಯಾಪ್ತಿಯಲ್ಲಿ ನಿವೇಶನ ತೆಗೆದುಕೊಂಡಿದ್ದು, ಅವರಿಗೆ ಒನ್ ಟೈಮ್ ಇನ್ಟ್ರೆಸ್ಟ್ ಬೆನಿಫಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. 125 ದಿನಗಳ ಒಳಗಾಗಿ ಅವರು ಬಾಕಿ ಇರುವ ತೆರಿಗೆ ಪಾವತಿಸಿದರೆ ಬಡ್ಡಿ ವಿನಾಯಿತಿ ನೀಡಲಾಗುವುದು” ಎಂದು ತಿಳಿಸಿದರು.
ಮೆಟ್ರೋ ಮೂರನೇ ಹಂತಕ್ಕೆ ಅನುಮತಿ
“ಇನ್ನು ಟನಲ್ ವಿಚಾರವಾಗಿ ಟೆಂಡರ್ ಕರೆಯುವ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಹೈಬ್ರಿಡ್ ಮಾದರಿಯಲ್ಲಿ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಸಿಎಂ ಜತೆ ತಾಂತ್ರಿಕ ಅಂಶ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಈ ಟೆಂಡರ್ ಜಾಗತಿಕ ಟೆಂಡರ್ ಆಗಿರಲಿದೆ. ಮೆಟ್ರೋ ವಿಚಾರವಾಗಿ ಮೂರನೇ ಹಂತದ ಮೆಟ್ರೋ ಯೋಜನೆಗೆ ಅಂದಾಜು ವೆಚ್ಚ ₹40,424 ಕೋಟಿಗೆ ಅನುಮತಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಕಸ ವಿಲೇವಾರಿಗೆ 33 ಪ್ಯಾಕೇಜ್
“ಈ ಹಿಂದೆ ಬಿಜೆಪಿ ಅವಧಿಯಲ್ಲಿ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ.
ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದರು.