ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಚಂಪರಣ್ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಶನಿವಾರ ತಡ ರಾತ್ರಿ ಕರ್ಣ ಎಂಬವರ ಹಸುಗಳ ಕೆಚ್ಚಲನ್ನು ಕಿಡಿಗೇಡಿಗಳು ಕತ್ತರಿಸಿ ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಈ ದುಷ್ಕೃತ್ಯದ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಖಂಡಿಸಿದ್ದರು. ಆರ್. ಅಶೋಕ್ ಹಸು ಮಾಲೀಕರಿಗೆ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.
ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ದೆವು. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.